ಬೆಂಗಳೂರು: ಪರಿಶಿಷ್ಟ ಜಾತಿಯಡಿ ಒಳ ಮೀಸಲಾತಿ ಜಾರಿಗೆ ತರುವ ಸಲುವಾಗಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಉಪಜಾತಿಗಳವಾರು ಪ್ರಾತಿನಿಧ್ಯತೆ ಬಗ್ಗೆ, ಅಗತ್ಯ ದತ್ತಾಂಶ ಸಂಗ್ರಹಿಸಲು ಮತ್ತು ಒಳ ಮೀಸಲಾತಿ ಜಾರಿ ಬಗ್ಗೆ ಸೂಕ್ತ ಶಿಫಾರಸು ಸಹಿತ ವರದಿ ಸಲ್ಲಿಸಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನದಾಸ್ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗ ರಚಿಸಿ ಸರ್ಕಾರ ಆದೇಶ ಹೊರಡಿಸಿದೆ.
ಸಚಿವ ಸಂಪುಟ ಸಭೆಯ ತೀರ್ಮಾನ ಆಧರಿಸಿ ಸಮಾಜ ಕಲ್ಯಾಣ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ. ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ ನಾನಾ ಉಪಜಾತಿಗಳಿಗೆ ಸೇರಿದವರ ಪ್ರಾತಿನಿಧ್ಯತೆ ಕುರಿತು ಎಂಪರಿಕಲ್ ಡೇಟಾ ಪಡೆದು ಒಳ ಮೀಸಲಾತಿ ಬಗ್ಗೆ ಸೂಕ್ತ ಶಿಫಾರಸುಗಳೊಂದಿಗೆ ಎರಡು ತಿಂಗಳೊಳಗೆ ವರದಿ ಸಲ್ಲಿಸಲು ಆಯೋಗಕ್ಕೆ ಸೂಚಿಸಲಾಗಿದೆ.
ಒಳ ಮೀಸಲಾತಿ ಸಂಬಂಧ ನಿರ್ಧಾರ ಕೈಗೊಳ್ಳಲು ನಿವೃತ್ತ ನ್ಯಾಯಮೂರ್ತಿಗಳ ಏಕ ಸದಸ್ಯ ಆಯೋಗ ರಚಿಸಲು ಕಳೆದ ಅಕ್ಟೋಬರ್ 28 ರಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು.