ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮೇಲ್ವಿಚಾರಣೆಗೆ ಆಯಾ ಕ್ಷೇತ್ರದ ಶಾಸಕರ ನೇತೃತ್ವದಲ್ಲಿ ಸಮಿತಿಗಳನ್ನು ರಚಿಸಲಾಗುತ್ತಿದೆ. ನೂತನ ಸಮಿತಿಗಳು ಜನವರಿಯಿಂದಲೇ ಅಸ್ತಿತ್ವಕ್ಕೆ ಬರಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಿತಿಗಳ ರಚನೆಗೆ ಈಗಾಗಲೇ ಅನುಮೋದನೆ ನೀಡಿದ್ದು, ಈ ಬಗ್ಗೆ ಆದೇಶ ಹೊರಡಿಸಲಾಗುವುದು. ಜನವರಿಯಿಂದ ನೂತನ ಸಮಿತಿಗಳು ಅಸ್ತಿತ್ವಕ್ಕೆ ಬರಲಿವೆ. ಈ ಮೊದಲು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಾಲೆಗಳ ಮೇಲ್ವಿಚಾರಣ ಕಾರ್ಯ ಮಾಡುತ್ತಿದ್ದರು. ಇದೇ ಮೊದಲ ಬಾರಿಗೆ ಶಾಸಕರ ನೇತೃತ್ವದಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಕಾರ್ಯನಿರ್ವಹಣೆಗೆ ಹೊಸ ಸಮಿತಿಯನ್ನು ರಚಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಸಮಿತಿಯಲ್ಲಿ ತಹಶೀಲ್ದಾರ್, ಕ್ಷೇತ್ರ ಶಿಕ್ಷಣಾಧಿಕಾರಿ, ತಾಲೂಕು ಪಂಚಾಯಿತಿ ಇಒ, ಶಾಲೆಗಳ ಮುಖ್ಯ ಶಿಕ್ಷಕರು, ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು, ಡಯಟ್ ಪ್ರತಿನಿಧಿಗಳು, ಹಾಗೂ ಜಿಲ್ಲಾ ಪಂಚಾಯಿತಿ ಅಧಿಕಾರಿಗಳು, ಸಾಮಾನ್ಯ ವರ್ಗದ ಪ್ರತಿನಿಧಿ, ಎಸ್.ಸಿ., ಎಸ್.ಟಿ., ಒಬಿಸಿ ಮಹಿಳೆಯರು, ಎಸ್.ಡಿ.ಎಂ.ಸಿ.ಯ ಇಬ್ಬರು ಸದಸ್ಯರನ್ನು ನಾಮನಿರ್ದೇಶನ ಮಾಡಲಾಗುವುದು ಎಂದು ಹೇಳಲಾಗಿದೆ.