
ಬೆಂಗಳೂರು: ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಹೆಚ್ಚುವರಿ ಶೇಕಡ 3 ರಷ್ಟು ಉದ್ಯೋಗ ಕಲ್ಪಿಸುವುದು ಕಡ್ಡಾಯವಾಗಿದೆ.
ಹೊಸ ಉದ್ಯೋಗ ನೀತಿಗೆ ಸರ್ಕಾರ ಅಸ್ತು ಎಂದಿದ್ದು, ಎ, ಬಿ ವರ್ಗದಲ್ಲಿಯೂ ಕನ್ನಡಿಗರಿಗೆ ಮೀಸಲಾತಿ ನೀಡಲು ತೀರ್ಮಾನಿಸಲಾಗಿದೆ. ಕೈಗಾರಿಕೆಗಳಲ್ಲಿ ಬಂಡವಾಳ ಹೂಡಿಕೆ ವಿಸ್ತರಣೆಯನ್ನು ಆಧರಿಸಿ ಸ್ಥಳೀಯ ಕನ್ನಡಿಗರಿಗೆ ಹೆಚ್ಚುವರಿ ಉದ್ಯೋಗ ನೀಡುವುದನ್ನು ಕಡ್ಡಾಯಗೊಳಿಸುವ ಕರ್ನಾಟಕ ಉದ್ಯೋಗ ನೀತಿ 2022 -25 ಕ್ಕೆ ಅನುಮೋದನೆ ನೀಡುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ಹೆಚ್ಚುವರಿ ಹೂಡಿಕೆ ಮಾಡುವ ಕಂಪನಿಗಳ ಆಧಾರದ ಮೇಲೆ ಕನ್ನಡಿಗರಿಗೆ ಶೇಕಡ 2.5 ರಿಂದ ಶೇಕಡ 3 ರಷ್ಟು ಉದ್ಯೋಗಾವಕಾಶ ಕಲ್ಪಿಸುವ ನೀತಿ ಇದಾಗಿದೆ. ಸಣ್ಣ, ಮಧ್ಯಮ, ಬೃಹತ್ ಕೈಗಾರಿಕೆಗಳಲ್ಲಿ ಬಂಡವಾಳ ಹೂಡಿಕೆ ವಿಸ್ತರಣೆ ಆಧರಿಸಿ ಸ್ಥಳೀಯರಿಗೆ ಉದ್ಯೋಗ ನೀಡುವುದನ್ನು ಕಡ್ಡಾಯಗೊಳಿಸಲಾಗಿದೆ.