ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮುಖ್ಯಮಂತ್ರಿ ಅವರ ಗೃಹ ಕಚೇರಿ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಮುಖ್ಯ ಚುನಾವಣಾ ಅಧಿಕಾರಿಗೆ ಜೆಡಿಎಸ್ ನಿಂದ ದೂರು ನೀಡಲಾಗಿದೆ.
ಸಿಎಂ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಚುನಾವಣೆ ಬಗ್ಗೆ ಸಭೆ ನಡೆಸಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಲಾಗಿದೆ. ಅಕ್ಟೋಬರ್ 27ರಂದು ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳನ್ನು ಸೇರಿಸಿಕೊಂಡು ಚನ್ನಪಟ್ಟಣ ಉಪಚುನಾವಣೆ ಸಂಬಂಧ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದಾರೆ. ಉಪಚುನಾವಣೆಗೆ ಗೃಹ ಕಚೇರಿಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಅಧಿಕಾರಿಗಳನ್ನು ಕೂಡ ದುರುಪಯೋಗ ಮಾಡಿಕೊಂಡಿದ್ದಾರೆ. ಇದು ಮಾದರಿ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದ್ದು, ಮುಖ್ಯಮಂತ್ರಿ ಮತ್ತು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಜೆಡಿಎಸ್ ಕಾನೂನು ವಿಭಾಗದ ಪ್ರಧಾನ ಕಾರ್ಯದರ್ಶಿ ಎಸ್.ಪಿ. ಪ್ರದೀಪ್ ಕುಮಾರ್ ಮುಖ್ಯ ಚುನಾವಣಾ ಅಧಿಕಾರಿಗೆ ಒತ್ತಾಯಿಸಿದ್ದಾರೆ.