
ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಕ್ಯಾ. ಅಮರಿಂದರ್ ಸಿಂಗ್ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಬಳಿಕ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ನನಗೆ ಅವಮಾನ ಮಾಡಲಾಗಿತ್ತು. ನನಗೆ ಮಾಹಿತಿ ನೀಡದೆ ಮೂರು ಸಲ ಸಿಎಲ್ಪಿ ಸಭೆ ನಡೆಸಲಾಗಿದ್ದು, ಇತ್ತೀಚೆಗೆ ನಡೆದ ಬೆಳವಣಿಗೆಯಿಂದ ಬೇಸತ್ತಿದ್ದೇನೆ. ನನಗೆ ಹಲವು ಬಾರಿ ಅಪಮಾನ ಮಾಡಲಾಗಿತ್ತು ಎಂದು ಬೇಸರ ಹೊರಹಾಕಿದ್ದಾರೆ.
ಅಪಮಾನದ ಬೆಳವಣಿಗೆಯಿಂದ ನೊಂದು ನಾನು ರಾಜೀನಾಮೆ ನೀಡಿದ್ದೇನೆ ಎಂದು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಮೊದಲ ಪ್ರತಿಕ್ರಿಯೆ ನೀಡಿರುವ ಅವರು, ಬೆಂಬಲಿಗರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ. ನಾನು ಈಗ ಕಾಂಗ್ರೆಸ್ ಪಕ್ಷದಲ್ಲಿ ಇದ್ದೇನೆ. ನನಗೆ ಸಹಕರಿಸಿದ ಬೆಂಬಲಿಗರು, ಕಾರ್ಯಕರ್ತರಿಗೆ ಧನ್ಯವಾದಗಳು. ಕಾಂಗ್ರೆಸ್ ಹೈಕಮಾಂಡಿಗೆ ನಂಬಿಕೆ ಇರುವ ವ್ಯಕ್ತಿಯನ್ನು ಮುಖ್ಯಮಂತ್ರಿ ಮಾಡಲಿ. ನನ್ನ ನಾಯಕತ್ವವನ್ನು ಪ್ರಶ್ನೆ ಮಾಡಲಾಗಿತ್ತು ಎಂದು ಹೇಳಿದ್ದಾರೆ.
ಹೊಸ ಮುಖ್ಯಮಂತ್ರಿಯ ಬಗ್ಗೆ ನನಗೆ ಗೊತ್ತಿಲ್ಲ. ಹೈಕಮಾಂಡ್ ನಾಯಕರು ಅದನ್ನು ತಿಳಿಸುತ್ತಾರೆ. ನಾನು ಸೋನಿಯಾಗಾಂಧಿಯವರಿಗೆ ರಾಜೀನಾಮೆ ನೀಡುವ ಬಗ್ಗೆ ಮೊದಲೇ ತಿಳಿಸಿದ್ದೇನೆ ಎಂದು ಅಮರೀಂದರ್ ಸಿಂಗ್ ತಿಳಿಸಿದ್ದಾರೆ.