ಯಾದಗಿರಿ: ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದ ಘಟನೆ ಉಳ್ಳೆಸೂಗೂರುನಲ್ಲಿ ನಡೆದಿದೆ.
ಕಲ್ಲು, ಬಡಿಗೆಗಳಿಂದ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದಾರೆ. ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಉಳ್ಳೆಸೂಗೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ಕಾಂಗ್ರೆಸ್ ಪಕ್ಷದ ಇಪ್ಪತ್ತಕ್ಕೂ ಹೆಚ್ಚು ಕಾರ್ಯಕರ್ತರು ಗಾಯಗೊಂಡಿದ್ದಾರೆ. ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಕಲ್ಲು ತೂರಾಟದಲ್ಲಿ 12 ಕ್ಕೂ ಹೆಚ್ಚು ಕಾರ್, 30 ಬೈಕ್ ಗಳು ಜಖಂಗೊಂಡಿವೆ. ಉಳ್ಳೆಸೂಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಆಯ್ಕೆಯಾಗಿದ್ದರು. ಚುನಾವಣೆಯ ನಂತರ ಮೆರವಣಿಗೆಯ ವೇಳೆ ಮಾರಾಮಾರಿ ನಡೆದಿದೆ.
ಸೋಲಿನಿಂದ ಹತಾಶರಾಗಿ ಕಲ್ಲು ತೂರಾಟ ನಡೆಸಿ ಹಲ್ಲೆ ಮಾಡಿರುವುದಾಗಿ ಆರೋಪಿಸಲಾಗಿದೆ. ಘಟನೆಗೆ ಪೊಲೀಸರ ವೈಫಲ್ಯವೂ ಕಾರಣವೆಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾ ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ವಡಗೇರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.