
ಬೆಂಗಳೂರು: ವಿಧಾನಸಭೆ ಚುನಾವಣೆಗೆ 124 ಅಭ್ಯರ್ಥಿಗಳ ಪಟ್ಟಿಯನ್ನು ಸಲೀಸಾಗಿ ಬಿಡುಗಡೆ ಮಾಡಿದ್ದ ಕಾಂಗ್ರೆಸ್ ಎರಡನೇ ಪಟ್ಟಿಯಲ್ಲಿ 100 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲು ಸಿದ್ಧತೆ ಮಾಡಿಕೊಂಡಿದೆ.
ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸುವ ಸಂಬಂಧ ಏಪ್ರಿಲ್ 4ರ ಮಂಗಳವಾರ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಹೀಗಾಗಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ರಾಜ್ಯ ಕಾಂಗ್ರೆಸ್ ನ ಹಿರಿಯ ನಾಯಕರು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ಸ್ಕ್ರೀನಿಂಗ್ ಸಮಿತಿ ಅಧ್ಯಕ್ಷ ಮೋಹನ್ ಪ್ರಕಾಶ್ ನೇತೃತ್ವದಲ್ಲಿ 100 ಕ್ಷೇತ್ರಗಳ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿ ಎಐಸಿಸಿಗೆ ಸಲ್ಲಿಸಲಾಗಿದೆ. ನಾಳೆ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಅಭ್ಯರ್ಥಿಗಳನ್ನು ಫೈನಲ್ ಮಾಡಿ ಎರಡನೇ ಪಟ್ಟಿ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.