ಬೆಂಗಳೂರು: ಇದು ಸ್ಪಷ್ಟವಾಗಿ ರಾಜಕೀಯ ಪ್ರೇರಿತವಾದ ಕಾಂಗ್ರೆಸ್ ಪಾದಯಾತ್ರೆಯಾಗಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಟೀಕಿಸಿದ್ದಾರೆ.
ಕಾಂಗ್ರೆಸ್ ಪಾದಯಾತ್ರೆಯಿಂದ ನೀರಾವರಿ ಯೋಜನೆಗೆ ಅನುಕೂಲವಾಗುವುದಿಲ್ಲ. ಕೃಷ್ಣಾ ನದಿ ವಿಚಾರವಾಗಿ ಕಾಂಗ್ರೆಸ್ ಯಾತ್ರೆ ಮಾಡಿದ್ದು ಏನಾಯ್ತು? ಕಾಂಗ್ರೆಸ್ ಪಕ್ಷಕ್ಕೆ ನಿಯಮ ಬೇಕಿಲ್ಲ. ರಾಜಕೀಯ ಮಾತ್ರ ಬೇಕಾಗಿದೆ ಎಂದು ಕಾಂಗ್ರೆಸ್ ಪಕ್ಷದ ಪಾದಯಾತ್ರೆ ವಿರುದ್ಧ ಸಿಎಂ ಗರಂ ಆಗಿದ್ದಾರೆ.
ಕಾಂಗ್ರೆಸ್ ಪಕ್ಷ ಆಡಳಿತದಲ್ಲಿದ್ದಾಗ ಡಿಪಿಆರ್ ಮಾಡಲು ಆಗಿರಲಿಲ್ಲ. ಬೆಟ್ಟವನ್ನು ಅಗೆದು ಇಲಿ ಹಿಡಿಯುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡಿದ್ದು, ಮೇಕೆದಾಟು ಯೋಜನೆ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ರಾಜಕೀಯ ಮಾಡುತ್ತಿದೆ ಎಂದು ಕಾಂಗ್ರೆಸ್ ಪಾದಯಾತ್ರೆ ವಿರುದ್ಧ ಗರಂ ಆಗಿದ್ದಾರೆ.
ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ಪಾದಯಾತ್ರೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಪ್ರಮುಖ ಸಚಿವರ ಸಭೆ ಕರೆದಿದ್ದೇನೆ. ಅದರಲ್ಲಿ ಹಲವಾರು ವಿಚಾರಗಳ ಬಗ್ಗೆ ಚರ್ಚೆ ನಡೆಸುತ್ತೇವೆ. ಬೆಂಗಳೂರಿನ ಅಭಿವೃದ್ಧಿ, ಮೇಕೆದಾಟು ಯೋಜನೆಯ ಬಗ್ಗೆ ಚರ್ಚೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಪಾದಯಾತ್ರೆ ಏಕೆ ಮಾಡುತ್ತಿದ್ದಾರೆ ಎಂಬ ಪ್ರಶ್ನೆ ಜನರಲ್ಲಿ ಮೂಡಿದೆ. ಅಧಿಕಾರದಲ್ಲಿದ್ದ ಅವರು ಸರಿಯಾಗಿ ಡಿಪಿಆರ್ ಮಾಡಿಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ಡಿ.ಕೆ. ಶಿವಕುಮಾರ್ ನೀರಾವರಿ ಸಚಿವರಾಗಿದ್ದರು. ಅವರು ಕೂಡ ಡಿಪಿಆರ್ ಸರಿಯಾಗಿ ಮಂಡಿಸಿಲ್ಲ. ಚುನಾವಣೆಗಾಗಿ ರಾಜಕೀಯ ಪಾದಯಾತ್ರೆ ಮಾಡುತ್ತಿದ್ದಾರೆ. ಕೆಲಸ ಮಾಡಿಲ್ಲವೆಂಬ ಅಪರಾಧ ಭಾವನೆ ಅವರಿಗೆ ಕಾಡುತ್ತಿದೆ. ಇದು ರಾಜಕೀಯ ಪ್ರೇರಿತ ಕಾಂಗ್ರೆಸ್ ಪಾದಯಾತ್ರೆ. ಅವರು ಯಾವುದೇ ನೀರಾವರಿ ಯೋಜನೆಯ ಬಗ್ಗೆ ಬದ್ಧತೆಯಿಂದ ಕೆಲಸ ಮಾಡಿಲ್ಲ. ಜನರು ಪದೇಪದೇ ಮರುಳಾಗುವುದಿಲ್ಲ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.