ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ ಬಳಿಕ ಬಂಡಾಯದ ಬಿಸಿ ಎದುರಿಸುವಂತಾಗಿದೆ. ಹಲವು ಕ್ಷೇತ್ರಗಳಲ್ಲಿ ಇದು ಪ್ರತಿದ್ವನಿಸಿದ್ದು, ಮಾಜಿ ಮುಖ್ಯಮಂತ್ರಿ ದಿವಂಗತ ಧರ್ಮಸಿಂಗ್ ಅವರ ಅಳಿಯ ಕೂಡ ಈಗ ಪಕ್ಷದ ವಿರುದ್ಧ ತಿರುಗಿ ಬಿದ್ದಿದ್ದಾರೆ.
ಬೀದರ್ ದಕ್ಷಿಣ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಧರ್ಮಸಿಂಗ್ ಅವರ ಅಳಿಯ ಚಂದ್ರಾ ಸಿಂಗ್, ಈಗ ಅಶೋಕ್ ಖೇಣಿ ಅವರಿಗೆ ಈ ಕ್ಷೇತ್ರದ ಟಿಕೆಟ್ ನೀಡಿರುವುದಕ್ಕೆ ಆಕ್ರೋಶಗೊಂಡಿದ್ದಾರೆ. ಹೀಗಾಗಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾಗಿದ್ದು ಸೋಮವಾರದಂದು ತಮ್ಮ ಬೆಂಬಲಿಗರ ಜೊತೆ ಸಭೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಚಂದ್ರಾ ಸಿಂಗ್, ನಾನು ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿದ್ದು, 12 ವರ್ಷಗಳಿಂದ ಪಕ್ಷವನ್ನು ಸಂಘಟಿಸಿ ಟಿಕೆಟ್ ಕೇಳಿದ್ದೆ. ಆದರೆ ಕಾಂಗ್ರೆಸ್ ನಾಯಕರು ದುಡ್ಡಿಗೆ ಮಾರಿಕೊಂಡಿದ್ದಾರೆ ಎಂದು ಆರೋಪಿಸಿದರು. ಅಲ್ಲದೆ ಬಂಡಾಯ ಅಭ್ಯರ್ಥಿಯಾಗಿ ತಾವು ಕಣಕ್ಕಿಳಿಯುವುದು ನಿಶ್ಚಿತ ಎಂದ ಅವರು, ಎಷ್ಟೇ ಒತ್ತಡ ಬಂದರೂ ನಿರ್ಧಾರ ಬದಲಾಯಿಸುವುದಿಲ್ಲ ಎಂದು ಹೇಳಿದರು.