ರಾಜ್ಯದಲ್ಲಿ ಸರಣಿ ರೂಪದಲ್ಲಿ ಹಿಂದೂ ವಿರೋಧಿ ಧೋರಣೆ ಅನುಸರಿಸುತ್ತಿರುವ ಕಾಂಗ್ರೆಸ್ ಸರ್ಕಾರ ಈಗ ಬರಿದಾಗಿರುವ ಬೊಕ್ಕಸ ತುಂಬಿಸಿಕೊಳ್ಳಲು ಹಿಂದೂ ದೇವಾಲಯಗಳ ಆದಾಯದ ಮೇಲೆಯೂ ವಕ್ರದೃಷ್ಟಿ ಬೀರಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಟೀಕಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಬೊಕ್ಕಸ ತುಂಬಿಸಿಕೊಳ್ಳಲು ಹಿಂದೂ ದೇವಾಲಯಗಳ ಆದಾಯದ ಮೇಲೂ ವಕ್ರ ದೃಷ್ಟಿ ಬೀರಿ ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯ ದತ್ತಿಗಳ ವಿಧೇಯಕವನ್ನು ಮಂಡಿಸಿ ಅಂಗೀಕಾರ ಪಡೆದು ಕೊಂಡಿದೆ ಎಂದು ಕಿಡಿಕಾರಿದ್ದಾರೆ.
ಇದರ ಅನುಸಾರ ಇನ್ನು ಮುಂದೆ 1 ಕೋಟಿ ರೂಪಾಯಿಗೂ ಆದಾಯ ಮೀರಿದ ದೇವಸ್ಥಾನಗಳ ಆದಾಯದ ಶೇ.10 ರಷ್ಟು ಹಣವನ್ನು ಸರ್ಕಾರ ಬಾಚಿಕೊಳ್ಳಲಿದೆ, ಇದು ದರಿದ್ರತನವಲ್ಲದೇ ಬೇರೇನೂ ಅಲ್ಲ, ದೇವರ ಅರಿಕೆ ಹಾಗೂ ದೇವಸ್ಥಾನದ ಅಭಿವೃದ್ಧಿಗೆ ಭಕ್ತರು ಸಮರ್ಪಿಸುವ ಕಾಣಿಕೆ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಹಾಗೂ ಭಕ್ತರಿಗೆ ಅನುಕೂಲ ಕಲ್ಪಿಸುವ ಕಾರ್ಯಕ್ಕೆ ವಿನಿಯೋಗವಾಗಬೇಕೇ ಹೊರತೂ, ಅದು ಬೇರೊಂದು ಕಾರ್ಯಕ್ಕೆ ವಿನಿಯೋಗವಾದರೆ ಜನರ ದೈವ ನಂಬಿಕೆಗಳ ಮೇಲೆ ನಡೆಯುವ ದೌರ್ಜನ್ಯ ಹಾಗೂ ವಂಚನೆಯಾಗುತ್ತದೆ ಎಂದು ತಿಳಿಸಿದ್ದಾರೆ.
ಇತರ ಧರ್ಮಗಳ ಆದಾಯದ ಮೇಲಿಲ್ಲದ ಕಣ್ಣು ಹಿಂದೂ ದೇವಾಲಯಗಳ ಮೇಲೆ ಮಾತ್ರ ಏಕೆ ಎಂಬುದು ಕೋಟಿ ಭಕ್ತರ ಪ್ರಶ್ನೆಯಾಗಿದೆ. ಭಕ್ತರ ಹಣದಲ್ಲಿ ಕಾಂಗ್ರೆಸ್ ಸರ್ಕಾರ ಪಾಲು ಕಸಿಯುವ ಬದಲು ‘ಸರ್ಕಾರ ನಡೆಸಲು ನೆರವಾಗಿ’ ಎಂದು ದೇವಸ್ಥಾನಗಳ ಬಳಿ ಗೋಲಕಗಳನ್ನಿಡಲಿ. ಸಹಾನುಭೂತಿ ಮನಸ್ಸಿನ ಭಕ್ತರು ನಿಮ್ಮ ಸರ್ಕಾರಕ್ಕೆ ಕಾಣಿಕೆ ನೀಡಲೂ ಬಹುದು? ಎಂದು ತಿಳಿಸಿದ್ದಾರೆ.