ಬೆಂಗಳೂರು: ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ಅವರನ್ನು ಕಾಂಗ್ರೆಸ್ ಹೈಕಮಾಂಡ್ ನೇಮಕ ಮಾಡಿದೆ.
ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಪುಷ್ಪಾ ಅಮರನಾಥ್ ಕಾರ್ಯನಿರ್ವಹಿಸುತ್ತಿದ್ದು, ಅವರ ಸ್ಥಾನಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಪುತ್ರಿ ಸೌಮ್ಯಾ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ನೇಮಕಾತಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.
ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದಿಂದ 2018 ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮೊದಲ ಬಾರಿಗೆ ಶಾಸಕಿಯಾಗಿದ್ದ ಸೌಮ್ಯಾ ರೆಡ್ಡಿ 2023 ರ ಚುನಾವಣೆಯಲ್ಲಿ ಪರಾಭವ ಹೊಂದಿದ್ದರು. 2024 ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಭಾರಿ ಪೈಪೋಟಿಯ ನಡುವೆ ಸೌಮ್ಯಾ ರೆಡ್ಡಿ ಅವರನ್ನು ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಲಾಗಿದೆ.