ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಕ್ಷದೊಳಗಿನ ಭಿನ್ನಾಭಿಪ್ರಾಯ ತಡೆಗೆ ಹೈಕಮಾಂಡ್ ಮುಂದಾಗಿದೆ. ವಿಧಾನಸಭೆ ಚುನಾವಣೆಗೆ ಒಗ್ಗಟ್ಟಿನಿಂದ ಪಕ್ಷವನ್ನು ಮುನ್ನಡೆಸುವ ನಿಟ್ಟಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾಳೆ ಹುಬ್ಬಳ್ಳಿಯಲ್ಲಿ ರಾಜ್ಯ ಕಾಂಗ್ರೆಸ್ ಪ್ರಮುಖರೊಂದಿಗೆ ಸಭೆ ನಡೆಸಲಿದ್ದಾರೆ.
ಆಗಸ್ಟ್ 3 ರಂದು ದಾವಣಗೆರೆಯಲ್ಲಿ ಸಿದ್ದರಾಮಯ್ಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಒಂದು ದಿನ ಮೊದಲೇ ಹುಬ್ಬಳ್ಳಿಗೆ ಆಗಮಿಸಲಿರುವ ರಾಹುಲ್ ಗಾಂಧಿ, ಮಂಗಳವಾರ ರಾತ್ರಿ ಕೆಪಿಸಿಸಿ ರಾಜಕೀಯ ವ್ಯವಹಾರಗಳ ಸಮಿತಿಯ ಪ್ರಮುಖರ ಸಭೆ ನಡೆಸಲಿದ್ದಾರೆ.
ಪಕ್ಷದೊಳಗಿನ ಭಿನ್ನಾಭಿಪ್ರಾಯ ಹೋಗಲಾಡಿಸುವುದು ಸಭೆಯ ಮುಖ್ಯ ಉದ್ದೇಶವಾಗಿದೆ. ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ವಿಚಾರದ ಬಗ್ಗೆ ಅನಗತ್ಯ ಚರ್ಚೆಗಳು ನಡೆಯುತ್ತಿದ್ದು ಈ ನಿಟ್ಟಿನಲ್ಲಿ ಸಭೆಯಲ್ಲಿ ನಾಯಕರೊಂದಿಗೆ ಚರ್ಚಿಸಿ ಭಿನ್ನಾಭಿಪ್ರಾಯ ಬಗೆಹರಿಸಲಾಗುವುದು. ಎಲ್ಲರೂ ಒಗ್ಗಟ್ಟಿನಿಂದ ಮುನ್ನಡೆಯಲು ಸೂಚನೆ ನೀಡಲಾಗುವುದು.