ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಲೀಡ್ ಕೊಡಿಸದ ಸಚಿವರು, ಶಾಸಕರಿಗೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕ್ಷೇತ್ರವಾರು ವರದಿ ಸಲ್ಲಿಸಲು ಸೂಚನೆ ನೀಡಿದ್ದಾರೆ. ಲೀಡ್ ಕೊಡಿಸದ ಸಚಿವರ ವಜಾಗೊಳಿಸುವಂತೆ ಕಾಂಗ್ರೆಸ್ ಪಕ್ಷದಲ್ಲಿಯೂ ಶಾಸಕರಿಂದ ಒತ್ತಾಯ ಕೇಳಿ ಬಂದಿದೆ.
ಕುಟುಂಬದವರನ್ನು ಸ್ಪರ್ಧೆಗಿಳಿಸಿದ ಅನೇಕ ಸಚಿವರಿಗೆ ಹಿನ್ನಡೆಯಾಗಿದೆ. ಲೋಕಸಭೆ ಚುನಾವಣೆಯಲ್ಲಿ ನಿರೀಕ್ಷಿತ ಫಲಿತಾಂಶ ಬಂದಿಲ್ಲ. ಲೀಡ್ ಸಿಗದ ಬಗ್ಗೆ ಕಾಂಗ್ರೆಸ್ ವಲಯದಲ್ಲಿ ಭಾರಿ ಚರ್ಚೆಯೇ ನಡೆದಿದೆ. ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಹಲವು ನಾಯಕರು ಈ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಎಐಸಿಸಿಯಿಂದ ವರದಿ ಪಡೆದು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ದಾವಣಗೆರೆ ಜಿಲ್ಲೆ ಚನ್ನಗಿರಿ ಶಾಸಕ ಬಸವರಾಜ ವಿ. ಶಿವಗಂಗಾ ಅವರು ಲೀಡ್ ಕೊಡಿಸದ ಸಚಿವರನ್ನು ವಜಾಗೊಳಿಸಿ ಹೊಸಬರಿಗೆ ಅವಕಾಶ ಕೊಡುವಂತೆ ಆಗ್ರಹಿಸಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಲೋಕಸಭೆ ಚುನಾವಣೆ ಫಲಿತಾಂಶದ ಬಗ್ಗೆ ಯಾರೂ ಅನಗತ್ಯವಾಗಿ ಹೇಳಿಕೆ ನೀಡಬಾರದು. ಮರ್ಯಾದೆಯಿಂದ ಬಾಯಿ ಮುಚ್ಚಿಕೊಂಡು ಇದ್ದರೆ ಒಳ್ಳೆಯದು. ಸೋಲಿನ ಬಗ್ಗೆ ಎಲ್ಲರೂ ಕುಳಿತು ಚರ್ಚೆ ಮಾಡಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.