ಬೆಂಗಳೂರು: ಕೇಂದ್ರ ಸರ್ಕಾರ ಅನುದಾನ ಬಿಡುಗಡೆಯಲ್ಲಿ ರಾಜ್ಯಕ್ಕೆ ಅನ್ಯಾಯ ಮಾಡಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ಫೆ.7ರಂದು ದೆಹಲಿಯಲ್ಲಿ ಪ್ರತಿಭಟನೆಗೆ ಮುಂದಾಗಿದ್ದಾರೆ. ಕೇಂದ್ರದ ವಿರುದ್ಧ ಪ್ರತಿಭಟನೆಗೆ ಕಾಂಗ್ರೆಸ್ ಸರ್ಕಾರ ಕರ್ನಾಟಕ ಸರ್ಕಾರದ ಲೋಗೋ ಬಳಸಿ ಜಾಹೀರಾತನ್ನು ನೀಡಿದೆ. ಇದನ್ನು ವಿರೋಧಿಸಿ ಬಿಜೆಪಿ ನಾಯಕರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
ರಾಜ್ಯ ಬಿಜೆಪಿ ಕಾರ್ಯದರ್ಶಿ ಪಿ.ರಾಜೀವ್, ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಹರತಾಳು ಹಲಪ್ಪ ಮೊದಲಾದ ಬಿಜೆಪಿ ನಾಯಕರು ರಾಜಭವನಕ್ಕೆ ತೆರಳಿ ದೂರು ನೀಡಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಪಸ್ಥಿತಿಯಲ್ಲಿ ಅವರ ಕಾರ್ಯದರ್ಶಿಯವರಿಗೆ ದೂರು ನೀಡಿದ್ದಾರೆ.
ಈ ವೇಳೆ ಮಾತನಾಡಿದ ಪಿ.ರಾಜೀವ್, ದೆಹಲಿ ಪ್ರತಿಭಟನೆಗೆ ರಾಜ್ಯ ಸರ್ಕಾರ ಜಾಹೀರಾತು ನೀಡಿದೆ. ಕರ್ನಾಟಕ ಸರ್ಕಾರದ ಲಾಂಛನ ಬಳಸಿ ಜಾಹೀರಾತು ನೀಡಲಾಗಿದೆ. ಜಾಹೀರಾತಿಗಾಗಿ 20ಕೋಟಿ ಖರ್ಚು ಮಾಡಿದೆ. ಬರದ ವೇಳೆ ಬಿಡಿಗಾಸು ಬಿಡುಗಡೆ ಮಾಡದ ಸರ್ಕಾರ ಸಾರ್ವಜನಿಕರ ಹಣ ದುರುಪಯೋಗ ಮಾಡಿಕೊಂಡಿದೆ ಎಂದು ಆರೋಪಿಸಿದ್ದಾರೆ.