ಬೆಂಗಳೂರು: ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿರುವುದನ್ನು ಖಂಡಿಸಿ ಕಾಂಗ್ರೆಸ್ ಹಾಗೂ ವಿವಿಧ ಸಂಘಟನೆಗಳು ನಾಳೆ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ಕೊಟ್ಟಿದ್ದು, ರಾಜ್ಯದ ಮೂಲೆ ಮೂಲೆಗಳಲ್ಲಿ ಹೋರಾಟಕ್ಕೆ ಸಜ್ಜಾಗಿವೆ.
ನಿನ್ನೆ ರಾಜಭವನದ ಎದುರು ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್ ಕಾರ್ಯಕರ್ತರು ನಾಳೆ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದ್ದಾರೆ. ನಾಳೆ ಬೆಳಿಗ್ಗೆ 11 ಗಂಟೆಗೆ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಾದ್ಯಂತ ಧರಣಿ ನಡೆಸಲಿದ್ದು, ವಿವಿಧ ಸಂಘಟನೆಗಳು ಬೆಂಬಲ ಘೋಷಿಸಿವೆ. ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದರ ವಿರುದ್ಧ ಪ್ರತಿಭಟನೆ ನಡೆಸಲಿವೆ.
ಇನ್ನೊಂದೆಡೆ ನಾಳೆ ಸಿದ್ದರಾಮಯ್ಯ ಅಭಿಮಾನಿಗಳ ಸಂಘ, ಕುರುಬರ ಸಂಘ, ಅಹಿಂದ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳು ರಾಜ್ಯಾದ್ಯಂತ ಪ್ರತಿಭಟನೆಗೆ ಸಜ್ಜಾಗಿವೆ. ಇಂದು ಮೈಸೂರು, ಚಿಕ್ಕಮಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ರಾಜ್ಯಪಾಲರ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.