
ಜೂನ್ 12 ರಂದು ಬಿಹಾರದ ಪಾಟ್ನಾದಲ್ಲಿ ನಡೆಯಲಿರುವ ಬಿಜೆಪಿಯೇತರ ಸಮಾನ ಮನಸ್ಕರ ಸಭೆಯಲ್ಲಿ ಕಾಂಗ್ರೆಸ್ ಭಾಗವಹಿಸಲಿದೆ.
ಆಡಳಿತಾರೂಢ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸದ ‘ಸಮಾನ ಮನಸ್ಸಿನ’ ರಾಜಕೀಯ ಪಕ್ಷಗಳ ಮಹತ್ವದ ಸಭೆಯಲ್ಲಿ ಕಾಂಗ್ರೆಸ್ ಭಾಗವಹಿಸಲಿದೆ ಎಂದು ಪಕ್ಷದ ಸಂವಹನ ಉಸ್ತುವಾರಿ ಜೈರಾಮ್ ರಮೇಶ್ ಸುದ್ದಿಗಾರರಿಗೆ ತಿಳಿಸಿದರು.
ಸಭೆಯ ಕಾರ್ಯತಂತ್ರವನ್ನು ಚರ್ಚಿಸಲು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ 10 ದಿನಗಳ ನಂತರ ಕಾಂಗ್ರೆಸ್ ತನ್ನ ನಿರ್ಧಾರ ತಿಳಿಸಿದೆ.
“ನಾವು ಜೂನ್ 12 ರಂದು ಪಾಟ್ನಾದಲ್ಲಿ ಸಭೆಗೆ ಹಾಜರಾಗುತ್ತೇವೆ. ಸಭೆಗೆ ಯಾರನ್ನು ನಿಯೋಜಿಸಬೇಕೆಂಬುದು ಇನ್ನೂ ನಿರ್ಧಾರವಾಗಬೇಕಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಇತರ ನಾಯಕರು ಅದನ್ನು ನಿರ್ಧರಿಸುತ್ತಾರೆ ಎಂದು ನನಗೆ ಖಚಿತವಾಗಿದೆ ಆದರೆ ನಾವು ಸಭೆಯಲ್ಲಿ ಭಾಗವಹಿಸುತ್ತೇವೆ” ಎಂದು ಜೈರಾಮ್ ರಮೇಶ್ ತಿಳಿಸಿದರು.
ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಜಾರ್ಖಂಡ್ ಮುಕ್ತಿ ಮೋರ್ಚಾ ಕೂಡ ಸಭೆಯಲ್ಲಿ ಭಾಗವಹಿಸಲಿದೆ. ಜಾರ್ಖಂಡ್‌ನಲ್ಲಿ ಕಾಂಗ್ರೆಸ್ ಮತ್ತು ಜೆಎಂಎಂ ಮೈತ್ರಿಕೂಟಗಳಾಗಿವೆ.
ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಕೂಡ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಆದರೆ ಜೂನ್ 12 ರಂದು ಪೂರ್ವನಿಯೋಜಿತ ಕಾರ್ಯಕ್ರಮ ಹೊಂದಿರುವ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಹಾಜರಾಗದಿರಬಹುದು.
ಮುಂದಿನ ವರ್ಷದ ಲೋಕಸಭೆ ಚುನಾವಣೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಒಗ್ಗೂಡಿಸುವ ಪ್ರತಿಪಕ್ಷಗಳ ಪ್ರಯತ್ನದಲ್ಲಿ ಜೂನ್ 12 ರ ಸಭೆ ದೊಡ್ಡ ಹೆಜ್ಜೆಯಾಗಿದೆ.