ಬೆಂಗಳೂರು: ಕಾಂಗ್ರೆಸ್ ಪಕ್ಷದ ಟಿಕೆಟ್ ಸಿಗದಿರುವುದಕ್ಕೆ ಆಕಾಂಕ್ಷಿಗಳ ಅಸಮಾಧಾನ ಭುಗಿಲೆದ್ದಿದೆ. ತಡರಾತ್ರಿಯಲ್ಲೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಿವಾಸದ ಎದುರು ಬೆಂಬಲಿಗರು ಜಮಾಯಿಸಿ ತಮ್ಮ ನಾಯಕರಿಗೆ ಟಿಕೆಟ್ ನೀಡಬೇಕೆಂದು ಘೋಷಣೆ ಮಾಡಿದ್ದಾರೆ.
ಕಡೂರು, ಚಿಕ್ಕಮಗಳೂರು, ತರೀಕೆರೆ ಸೇರಿದಂತೆ ವಿವಿಧ ಕ್ಷೇತ್ರಗಳ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಬೆಂಬಲಿಗರು ಡಿ.ಕೆ. ಶಿವಕುಮಾರ್ ಜೊತೆಗೆ ಸಭೆ ನಡೆಸಿದ್ದಾರೆ. ಸದಾಶಿವನಗರದ ಮನೆಯಲ್ಲಿ ನಡೆದ ಸಭೆಯಲ್ಲಿ ತಮ್ಮ ನಾಯಕರಿಗೆ ಟಿಕೆಟ್ ನೀಡವಂತೆ ಬೆಂಬಲಿಗರು ಒತ್ತಾಯಿಸಿದ್ದಾರೆ.
ಪಕ್ಷ ಅಧಿಕಾರಕ್ಕೆ ಬರುತ್ತದೆ. ಹೀಗಾಗಿ ಟಿಕೆಟ್ ಗೆ ಬೇಡಿಕೆ ಹೆಚ್ಚಾಗಿದೆ. ಟಿಕೆಟ್ ವಂಚಿತರು ಅಸಮಾಧಾನ ವ್ಯಕ್ತಪಡಿಸುವುದರಲ್ಲಿ ತಪ್ಪೇನೂ ಇಲ್ಲ. ಅವರೆಲ್ಲ ಪಕ್ಷಕ್ಕಾಗಿ ದುಡಿದವರು. ಪಕ್ಷ ಅಧಿಕಾರಕ್ಕೆ ಬಂದ ನಂತರ ಅವಕಾಶ ನೀಡಲಾಗುವುದು. ಚಿಕ್ಕಮಗಳೂರು ಕ್ಷೇತ್ರದಲ್ಲೇ ಎಂಟು ಜನ ಆಕಾಂಕ್ಷಿಗಳಿದ್ದಾರೆ, ಎಲ್ಲರ ಜೊತೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುತ್ತದೆ. ಒಳ್ಳೆಯ ಮುಹೂರ್ತ ನೋಡಿ ಕಾಂಗ್ರೆಸ್ ಪಕ್ಷದ ಮೂರನೇ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.