ಬೆಂಗಳೂರು: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಟಿಕೆಟ್ ವಂಚಿತರ ಅಸಮಾಧಾನ ಭುಗಿಲೆದ್ದಿದೆ. ಅನೇಕರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಸ್ವತಂತ್ರ ಅಭ್ಯರ್ಥಿಗಳಾಗಿ ಸ್ಪರ್ಧಿಸಲು ಮುಂದಾಗಿದ್ದಾರೆ. ಮತ್ತೆ ಕೆಲವರು ಜೆಡಿಎಸ್ ಅಭ್ಯರ್ಥಿಗಳಾಗಲು ಮುಂದಾಗಿದ್ದಾರೆ.
ಉಡುಪಿ ಟಿಕೆಟ್ ಆಕಾಂಕ್ಷಿ ಕೃಷ್ಣಮೂರ್ತಿ ಆಚಾರ್ಯ, ಚಿತ್ರದುರ್ಗ ಟಿಕೆಟ್ ಆಕಾಂಕ್ಷಿ ಎಸ್.ಕೆ. ಬಸವರಾಜನ್, ಕಿತ್ತೂರು ಟಿಕೆಟ್ ಆಕಾಂಕ್ಷಿ ಮಾಜಿ ಸಚಿವ ಡಿ.ಬಿ. ಇನಾಮಾದಾರ ಸೊಸೆ ಲಕ್ಷ್ಮೀ ಇನಾಮಾದಾರ ಅವರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.
ಚಿತ್ರದುರ್ಗದ ಟಿಕೆಟ್ ಆಕಾಂಕ್ಷಿಯಾಗಿದ್ದ ವಿಧಾನ ಪರಿಷತ್ ಮಾಜಿ ಸದಸ್ಯ ರಘು ಆಚಾರ್ ಜೆಡಿಎಸ್ ನಿಂದ ಕಣಕ್ಕೆ ಇಳಿಯುವುದಾಗಿ ಘೋಷಿಸಿದ್ದಾರೆ. ಏ. 14 ರಂದು ಜೆಡಿಎಸ್ ಸೇರಲಿರುವ ರಘು ಆಚಾರ್ 17 ರಂದು ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಹಾನಗಲ್ ನಲ್ಲಿ ಮನೋಹರ್ ತಹಶೀಲ್ದಾರ್ ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರಿದ್ದಾರೆ. ಶಿರಸಿ -ಸಿದ್ದಾಪುರ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ವೆಂಕಟೇಶ ಹೆಗಡೆ ಹೊಸಬಾಳೆ, ಮಂಡ್ಯದ ಕೆ.ಕೆ. ರಾಧಾಕೃಷ್ಣ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಲಿದ್ದಾರೆ.
ತುಮಕೂರು ಟಿಕೆಟ್ ಆಕಾಂಕ್ಷಿಯಾಗಿದ್ದ ರಫೀಕ್ ಅಹಮದ್ ರಾಜೀನಾಮೆ ನೀಡಿದ್ದಾರೆ. ಕಡೂರು ಕ್ಷೇತ್ರದ ಆಕಾಂಕ್ಷಿಯಾಗಿದ್ದ ವೈ.ಎಸ್.ವಿ. ದತ್ತ ಏಪ್ರಿಲ್ 9ರಂದು ಬೆಂಬಲಿಗರ ಸಭೆ ನಡೆಸಿ ನಿರ್ಧಾರ ಪ್ರಕಟಿಸಲಿದ್ದಾರೆ. ಟಿಕೆಟ್ ವಂಚಿತ ಆಕಾಂಕ್ಷಿಗಳ ಬೆಂಬಲಿಗರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮನೆಗೆ ದೌಡಾಯಿಸಿ ತಮ್ಮ ನಾಯಕರಿಗೆ ಟಿಕೆಟ್ ನೀಡಬೇಕೆಂದು ಒತ್ತಡ ಹೇರತೊಡಗಿದ್ದಾರೆ.