ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, 61 ಹಾಲಿ ಶಾಸಕರು ಸೇರಿದಂತೆ 124 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆಯಾಗಿದೆ. 124 ಅಭ್ಯರ್ಥಿಗಳಲ್ಲಿ ಹಲವು ಕ್ಷೇತ್ರಗಳಲ್ಲಿ ಅಪ್ಪ ಮಕ್ಕಳಿಗೂ ಟಿಕೆಟ್ ಘೋಷಣೆಯಾಗಿರುವುದು ವಿಶೇಷವಾಗಿದೆ.
ಬೆಂಗಳೂರು ವಿಜಯನಗರದಿಂದ ಎಂ. ಕೃಷ್ಣಪ್ಪ, ಗೋವಿಂದರಾಜನಗರ ಕ್ಷೇತ್ರದಿಂದ ಪ್ರಿಯಾಕೃಷ್ಣ ಸ್ಪರ್ಧಿಸಲಿದ್ದಾರೆ. ಮಾಜಿ ಸಚಿವ ರಾಮಲಿಂಗಾರೆಡ್ಡಿ ಬಿಟಿಎಂ ಲೇಔಟ್ ಹಾಗೂ ಅವರ ಪುತ್ರಿ ಸೌಮ್ಯಾ ರೆಡ್ಡಿ ಜಯನಗರ ಕ್ಷೇತ್ರದ ಅಭ್ಯರ್ಥಿಗಳಾಗಿದ್ದಾರೆ.
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪ ಹಾಗೂ ದಾವಣಗೆರೆ ಉತ್ತರ ಕ್ಷೇತ್ರದಲ್ಲಿ ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ಟಿಕೆಟ್ ಘೋಷಣೆಯಾಗಿದೆ. ದೇವನಹಳ್ಳಿ ಕ್ಷೇತ್ರದಿಂದ ಕೇಂದ್ರದ ಮಾಜಿ ಸಚಿವ ಕೆ.ಹೆಚ್. ಮುನಿಯಪ್ಪ ಸ್ಪರ್ದಿಸಲಿದ್ದು, ಅವರ ಪುತ್ರಿ ರೂಪಕಲಾ ಅವರಿಗೆ ಕೆಜಿಎಫ್ ಕ್ಷೇತ್ರದ ಟಿಕೆಟ್ ನೀಡಲಾಗಿದೆ.
ವಿಧಾನ ಪರಿಷತ್ ಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಸಹೋದರ ಬಿ.ಕೆ. ಶಿವರಾಮ್ ಅವರ ಪುತ್ರ ರಕ್ಷಿತ್ ಶಿವರಾಮ್ ಅವರಿಗೆ ಬೆಳ್ತಂಗಡಿ ಕ್ಷೇತ್ರದಲ್ಲಿ ಟಿಕೆಟ್ ನೀಡಲಾಗಿದೆ.
ಮಾಜಿ ಸಿಎಂ ಸಿದ್ಧರಾಮಯ್ಯ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದು, ಅವರ ಪುತ್ರ ಯತೀಂದ್ರ ಅವರಿಗೆ ಟಿಕೆಟ್ ತಪ್ಪಿದೆ. ಅವರು ಬೇರೆ ಕ್ಷೇತ್ರದಿಂದ ಸ್ಪರ್ಧಿಸಬಹುದು ಎನ್ನಲಾಗಿದೆ.
ಪಾವಗಡ ಕ್ಷೇತ್ರದಲ್ಲಿ ಹಾಲಿ ಶಾಸಕ ವೆಂಕಟರಮಣಪ್ಪ ಅವರ ಬದಲಿಗೆ ಅವರ ಪುತ್ರ ಹೆಚ್.ವಿ. ವೆಂಕಟೇಶ್ ಅವರಿಗೆ ಟಿಕೆಟ್ ನೀಡಲಾಗಿದೆ.