ಬೆಂಗಳೂರು: ಕೆಲವರು ಮುಖ್ಯಮಂತ್ರಿಯಾಗಲು ಒಂದು ಸಾವಿರ ಕೋಟಿ ರೂಪಾಯಿ ಇಟ್ಟುಕೊಂಡು ಕಾಯುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ನೀಡಿರುವ ಹೇಳಿಕೆಯ ವಿರುದ್ಧ ಮಾಜಿ ಸಂಸದ ವಿ.ಎಸ್. ಉಗ್ರಪ್ಪ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಬೀಳಿಸುವ ಪ್ರಯತ್ನ ನಡೆಯುತ್ತಿದೆ. ಇದರ ಭಾಗವಾಗಿ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ. ಹಿಂಬಾಗಿಲಿನಿಂದ ಅಧಿಕಾರ ಹಿಡಿಯುವ ಕೆಲಸ ಮಾಡಲಾಗುತ್ತಿದೆ. ಹೀಗಾಗಿ ಯತ್ನಾಳ್ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ಉಗ್ರಪ್ಪ ತಿಳಿಸಿದ್ದಾರೆ.
ಯತ್ನಾಳ್ ಅವರನ್ನು ಕರೆಸಿ ವಿಚಾರಣೆ ನಡೆಸುವಂತೆ ಕೋರಲಾಗಿದೆ. ಅಲ್ಲದೇ, ಇಡಿ, ಐಟಿ ಅಧಿಕಾರಿಗಳು ಕೂಡ ಯತ್ನಾಳ್ ಅವರು ನೀಡಿದ 1 ಸಾವಿರ ಕೋಟಿ ರೂ. ಹೇಳಿಕೆಯನ್ನು ಗಮನಿಸಬೇಕು ಎಂದು ಆಗ್ರಹಿಸಿದ್ದಾರೆ.