alex Certify ಸೆ.15ರಂದು ಶಾಲೆ, ಕಾಲೇಜುಗಳಲ್ಲಿ ‘ಸಂವಿಧಾನ ಪೀಠಿಕೆ ‘ ಓದುವುದು ಕಡ್ಡಾಯ : ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೆ.15ರಂದು ಶಾಲೆ, ಕಾಲೇಜುಗಳಲ್ಲಿ ‘ಸಂವಿಧಾನ ಪೀಠಿಕೆ ‘ ಓದುವುದು ಕಡ್ಡಾಯ : ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಎಲ್ಲರೂ ಭಾರತದ ಸಂವಿಧಾನದ ತತ್ವಗಳನ್ನು ತಮ್ಮ ಜೀವನ ಮತ್ತು ಕರ್ತವ್ಯಗಳಲ್ಲಿ ಅಳವಡಿಸಿಕೊಂಡು ಪೀಠಿಕೆಗೆ ಬದ್ಧರಾಗುವ ಉದ್ದೇಶದಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸೆ.15ರಂದು ಬೆಳಗ್ಗೆ 10 ಗಂಟೆಗೆ ರಾಜ್ಯಾದ್ಯಂತ ಸಂವಿಧಾನ ಪೀಠಿಕೆಯನ್ನು ಒಟ್ಟಾಗಿ ಓದುವ ಬೃಹತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ. ದಯಾನಂದ ಅವರು ತಿಳಿಸಿದರು.

ಅವರು ಇಂದು ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ರಾಜ್ಯ ಮಟ್ಟದಲ್ಲಿ ನಗರದ ವಿಧಾನ ಸೌಧದ ಮುಂಭಾಗದಲ್ಲಿ ಭಾರತ ಸಂವಿಧಾನದ ಪೀಠಿಕೆಯನ್ನು ಓದುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲಾ ಮಟ್ಟದ ಕಾರ್ಯಕ್ರಮವೂ ಸಹ ಅದೇ ಸ್ಥಳದಲ್ಲಿ ನಡೆಯಲಿದೆ ಎಂದು ತಿಳಿಸಿದರು.

ಜಿಲ್ಲಾ ಮಟ್ಟದ ಅಧಿಕಾರಿಗಳು ಸಂವಿಧಾನ ಓದು ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಬೇಕು. ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಮಟ್ಟದಲ್ಲಿರುವ ಕಚೇರಿಗಳು ಹಾಗೂ ವಿದ್ಯಾಸಂಸ್ಥೆಗಳು ತಮ್ಮ ಕಚೇರಿ, ವಿದ್ಯಾಸಂಸ್ಥೆಗಳಲ್ಲಿ ಸಾಮೂಹಿಕವಾಗಿ ಸಂವಿಧಾನ ಪೀಠಿಕೆ ಓದಬೇಕು ಎಂದು ಸೂಚಿಸಿದರು.

ಈ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲಾ ವಿದ್ಯಾಸಂಸ್ಥೆಗಳು ಹಾಗೂ ಇಲಾಖೆಗಳು ಆನ್ಲೈನ್ ಮೂಲಕ ಪಾಲ್ಗೊಳ್ಳಲಿದ್ದು, ಅಂದು ಎಲ್ಲಾ ಸರ್ಕಾರಿ ಕಛೇರಿ, ಶಾಲಾ-ಕಾಲೇಜು, ವಿದ್ಯಾರ್ಥಿ ನಿಲಯಗಳಲ್ಲಿ ಸಂವಿಧಾನ ಪೀಠಿಕೆ ಓದಬೇಕು. ಈ ಮೂಲಕ ಸಂವಿಧಾನ ಪೀಠಿಕೆಯ ಮಹತ್ವ ಹಾಗೂ ಸಂವಿಧಾನದ ಮೌಲ್ಯ ಮತ್ತು ತತ್ವಗಳನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದರು.

ಸಂವಿಧಾನದ ಪೀಠಿಕೆ ಓದಲು ಆನ್ಲೈನ್ ನೊಂದಣಿ ಪ್ರಕ್ರಿಯೆ ಅತ್ಯಂತ ಸರಳವಾಗಿದೆ. ನೊಂದಣಿ ಅವಧಿ ಸೆ.12 ರಂದು ಸಂಜೆ 06 ಕ್ಕೆ ಮುಕ್ತಾಯವಾಗಲಿದೆ. ಸಮಾಜ ಕಲ್ಯಾಣ ಇಲಾಖೆ ರೂಪಿಸಿರುವ ವೆಬ್ಸೈಟ್ https://thepreamble-swdkar.in ನಲ್ಲಿ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ಇಮೇಲ್ ವಿಳಾಸ, ಮುಂತಾದ ವಿವರ ನೀಡಿ ನೊಂದಣಿ ಮಾಡಿಕೊಳ್ಳಬೇಕು.

ಸೆ.15 ರಂದು ಓದಬೇಕಾದ ಸಂವಿಧಾನದ ಪೀಠಿಕೆ

ಸಂವಿಧಾನದ ಪೀಠಿಕೆಯಲ್ಲಿರುವ ಪ್ರತಿಯೊಂದು ಪದಗಳು, ವಾಕ್ಯ ಬಹಳಷ್ಟು ಮುಖ್ಯವಾಗಿದ್ದು, ಪ್ರತಿಯೊಂದಕ್ಕೂ ವಿಶೇಷ ಅರ್ಥವಿದೆ, ಇದರ ಮಹತ್ವವನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕಿದೆ. ಹೀಗಾಗಿ ಸೆ.15 ರಂದು ಬೆಳಿಗ್ಗೆ 10 ಗಂಟೆಗೆ ಎಲ್ಲರೂ ಸಂವಿಧಾನದ ಪೀಠಿಕೆಯಾದ, “ಭಾರತದ ಜನಗಳಾದ ನಾವು ಭಾರತವನ್ನು ಒಂದು ಸಾರ್ವಭೌಮ, ಸಮಾಜವಾದೀ, ಸರ್ವಧರ್ಮ, ಸಮಭಾವದ ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ ರಚಿಸಲು ಮತ್ತು ಅದರ ಸಮಸ್ತ ನಾಗರಿಕರಿಗೆ: ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ: ವಿಚಾರ, ಅಭಿವ್ಯಕ್ತಿ, ವಿಶ್ವಾಸ, ಧರ್ಮಶ್ರದ್ಧೆ ಮತ್ತು ಉಪಾಸನಾ ಸ್ವಾತಂತ್ರ್ಯ: ಸ್ಥಾನಮಾನ ಹಾಗೂ ಅವಕಾಶ ಸಮಾನತೆ ದೊರೆಯುವಂತೆ ಮಾಡಲು ಮತ್ತು ವ್ಯಕ್ತಿ ಗೌರವವನ್ನು ರಾಷ್ಟ್ರದ ಏಕತೆಯನ್ನು ಹಾಗೂ ಅಖಂಡತೆಯನ್ನು ಸುನಿಶ್ಚಿತಗೊಳಿಸಿ, ಅವರಲ್ಲಿ ಭ್ರಾತೃಭಾವನೆಯನ್ನು ವೃದ್ಧಿಗೊಳಿಸಲು ಶ್ರದ್ಧಾಪೂರ್ವಕವಾಗಿ ಸಂಕಲ್ಪ ಮಾಡಿದವರಾಗಿ: ನಮ್ಮ ಸಂವಿಧಾನ ಸಭೆಯಲ್ಲಿ 1949 ನೇ ಇಸವಿ ನವೆಂಬರ್ ತಿಂಗಳ ಇಪ್ಪತ್ತಾರನೇ ತಾರೀಖಾದ ಈ ದಿವಸ ಈ ಮೂಲಕ ಈ ಸಂವಿಧಾನವನ್ನು ಅಂಗೀಕರಿಸಿ, ಅಧಿನಿಯಮಿಸಿ ಅರ್ಪಿಸಿಕೊಂಡಿದ್ದೇವೆ” ಎಂಬುದಾಗಿ ಓದಿ ಪ್ರತಿಯೊಬ್ಬರೂ ಪ್ರತಿಜ್ಞಾ ವಿಧಿ ಸ್ವೀಕರಿಸಬೇಕು.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...