
ಬೆಂಗಳೂರು: ಹಣಕಾಸಿನ ಪರಿಸ್ಥಿತಿಯನ್ನು ಅವಲೋಕಿಸಿ, ಗುತ್ತಿಗೆದಾರರ ಬಾಕಿ ಬಿಲ್ಲುಗಳ ಪಾವತಿ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಏಪ್ರಿಲ್ ಮಾಹೆಯಲ್ಲಿ ಸಾಧ್ಯವಾದಷ್ಟು ಬಾಕಿ ಬಿಲ್ಲುಗಳನ್ನು ಪಾವತಿಸಲು ಪ್ರಯತ್ನಿಸಲಾಗುವುದು. ಹಿಂದಿನ ಸರ್ಕಾರದ ಅವಧಿಯಲ್ಲಿ ಅನುದಾನವಿಲ್ಲದಿದ್ದರೂ, ಟೆಂಡರ್ ಪ್ರಕ್ರಿಯೆಯನ್ನು ಕೈಗೊಂಡು, ಕಾಮಗಾರಿ ಪ್ರಾರಂಭಿಸಿದ ಕಾರಣದಿಂದಾಗಿ ಬಾಕಿ ಬಿಲ್ಲುಗಳು ಹೆಚ್ಚಿವೆ. ಇದಕ್ಕೆ ನಮ್ಮ ಸರ್ಕಾರ ಹೊಣೆಯಲ್ಲ ಎಂದರು.
ಇನ್ನು ಅಧಿಕಾರಿಗಳ ಮಟ್ಟದಲ್ಲಿ ಕಮೀಷನ್ ದಂಧೆ ನಡೆದಿರುವುದಾಗಿ ಗುತ್ತಿಗೆ ಸಂಘದವರ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ, ಲಂಚ ಪಡೆಯುವುದು ಹಾಗೂ ಲಂಚ ನೀಡುವುದು ಸಹ ಅಪರಾಧ. ಈ ರೀತಿಯ ಕೃತ್ಯದಲ್ಲಿ ಯಾರು ತೊಡಗಬಾರದು ಎಂದರು.