ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಮತ್ತು ಸಾವಿನ ಸಂಖ್ಯೆ ಏರಿಕೆಯಾಗುತ್ತಿದ್ದು, ಆಸ್ಪತ್ರೆಗಳಲ್ಲಿ ಬೆಡ್ ಕೊರತೆ ಕಂಡುಬಂದಿದೆ. ಅಂದ ಹಾಗೆ, ಆಸ್ಪತ್ರೆಗಳಲ್ಲಿ ಬೆಡ್ ಕೊರತೆಯಾಗಲು ಕಾರಣವೇನೆಂಬುದನ್ನು ಸಂಸದ ತೇಜಸ್ವಿ ಸೂರ್ಯ ಬಯಲಿಗೆಳೆದಿದ್ದಾರೆ.
ಬೆಡ್ ಬ್ಲಾಕ್ ಮಾಡುವ ದಂಧೆ ನಡೆಯುತ್ತಿದೆ ಎಂಬುದನ್ನು ತಿಳಿಸಿದ್ದಾರೆ. ಸಂಕಷ್ಟದಲ್ಲಿರುವ ಸೋಂಕಿತರಿಗೆ ಬೆಡ್ ಒದಗಿಸಬೇಕಾದವರೇ ಬೆಡ್ ಗಳನ್ನು ಬ್ಲಾಕ್ ಮಾಡುವ ಮೂಲಕ ಅವ್ಯವಹಾರ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ. ಬಿಬಿಎಂಪಿ ದಕ್ಷಿಣ ವಲಯದ ಕೋವಿಡ್ ವಾರ್ ರೂಮ್ ಅಧಿಕಾರಿಗಳು, ಪ್ರಭಾವಿಗಳ ಹೆಸರಲ್ಲಿ 4 ಸಾವಿರಕ್ಕೂ ಅಧಿಕ ಹೆಚ್ಚು ಬೆಡ್ ಗಳನ್ನು ಬುಕ್ ಮಾಡಿದ್ದು ಅವುಗಳನ್ನು ಲಕ್ಷಾಂತರ ರೂಪಾಯಿಗೆ ಮಾರಾಟ ಮಾಡುತ್ತಿದ್ದಾರೆ. ಐಸಿಯು, ವೆಂಟಿಲೇಟರ್, ಆಕ್ಸಿಜನ್ ವ್ಯವಸ್ಥೆ ಇರುವ ಬೆಡ್ ಗಳನ್ನು ಬ್ಲಾಕ್ ಮಾಡಲಾಗುತ್ತಿತ್ತು. ಅಧಿಕಾರಿಗಳ ನಿರ್ದೇಶನದ ಅನ್ವಯ ಹೊರಗಿನ ಏಜೆಂಟರು ಇಂತಹ ಕೆಲಸ ಮಾಡುತ್ತಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ.
ಸೋಂಕಿತರ ಮಾಹಿತಿ ಪಡೆದು 12 ಬೇರೆಬೇರೆ ಆಸ್ಪತ್ರೆಗಳಲ್ಲಿ ಅವರದೇ ಹೆಸರಿನಲ್ಲಿ ಬೆಡ್ ಬುಕ್ ಮಾಡಲಾಗುತ್ತದೆ. ಮಧ್ಯರಾತ್ರಿ ಹೊತ್ತಲ್ಲಿಯೂ ಬೆಡ್ ಬುಕ್ ಮಾಡಲಾಗುತ್ತಿದ್ದು, ಇದರ ಬಗ್ಗೆ ತನಿಖೆ ನಡೆಸಬೇಕೆಂದು ಅವರು ಹೇಳಿದ್ದಾರೆ. ತೇಜಸ್ವಿ ಸೂರ್ಯ ದಂಧೆಯ ಬಗ್ಗೆ ಮಾಹಿತಿ ನೀಡಿದ ಬೆನ್ನಲ್ಲೇ ಜಯನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಇಬ್ಬರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ.