ಬೆಂಗಳೂರು: ರಾಜ್ಯದಲ್ಲಿ ಜೂನ್ 7 ರವರೆಗೆ ಕಠಿಣಾತಿಕಠಿಣ ನಿಯಮ ಜಾರಿಗೆ ತರಲಾಗುತ್ತಿದೆ. ಬೆಳಗ್ಗೆ 9.45 ರೊಳಗೆ ಮನೆ ಸೇರಿಕೊಳ್ಳಬೇಕು. ನಿಯಮ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.
10 ಗಂಟೆಯ ನಂತರವೂ ಅನೇಕರು ಓಡಾಡುತ್ತಿದ್ದಾರೆ. ಹೀಗಾಗಿ ಬಿಗಿ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ ಎಂದು ಸಿಎಂ ತಿಳಿಸಿದ್ದಾರೆ.
ರಾಜ್ಯದಲ್ಲಿ ಮೇ 24 ರಿಂದ 14 ದಿನಗಳ ಕಾಲ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದು, ಜೂನ್ 7 ರಂದು ಬೆಳಗ್ಗೆ 6 ಗಂಟೆಯವರೆಗೆ ಕಠಿಣ ನಿಯಮ ಜಾರಿಯಲ್ಲಿರುತ್ತದೆ. ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಮಾಡಿದ ನಂತರ ನಿಯಂತ್ರಣಕ್ಕೆ ಬರುತ್ತಿದ್ದು, ಈಗ ಇರುವ ಮಾರ್ಗಸೂಚಿಗಳೇ ಮುಂದುವರೆಯಲಿದೆ. ಜನರು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇಲ್ಲದಿದ್ದರೆ ಬಿಗಿಯಾದ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿರುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕಠಿಣ ನಿಯಮಗಳು ಜಾರಿಯಲ್ಲಿ ಇರುತ್ತದೆ. ಬೆಳಗ್ಗೆ 9.45 ರೊಳಗೆ ಜನ ಮನೆ ಸೇರಿಕೊಳ್ಳಬೇಕು. ಅನಗತ್ಯವಾಗಿ ಓಡಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.