ನವದೆಹಲಿ: ದೇಶದ ಅನೇಕ ರಾಜ್ಯಗಳಲ್ಲಿ ಕೊರೋನಾ ಸೋಂಕಿತರಿಗೆ ಔಷಧ, ಆಕ್ಸಿಜನ್, ಔಷಧ, ಬೆಡ್ ಕೊರತೆ ಕಂಡುಬಂದಿದೆ. ಇದರ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್ ಕೋವಿಡ್ ನಿರ್ವಹಿಸಲು ರಾಷ್ಟ್ರೀಯ ಯೋಜನೆ ರೂಪಿಸುವಂತೆ ತಿಳಿಸಿದೆ.
ಸೋಂಕು ನಿರ್ವಹಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಮಾಡಿದೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡ ಕೋರ್ಟ್ ದೇಶದಲ್ಲಿ ಪ್ರಸ್ತುತ ರಾಷ್ಟ್ರೀಯ ತುರ್ತು ಪರಿಸ್ಥಿತಿ ಉಂಟಾಗಿದೆ.
ಸೋಂಕಿತರಿಗೆ ಅಗತ್ಯವಾಗಿರುವ ಬೆಡ್, ಆಕ್ಸಿಜನ್, ಔಷಧ, ಲಸಿಕೆ ಮೊದಲಾದವುಗಳ ಬಗ್ಗೆ ರಾಷ್ಟ್ರೀಯ ಯೋಜನೆ ಸಿದ್ಧಪಡಿಸಬೇಕೆಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ.ಎಸ್. ಬೊಬ್ಡೆ ನೇತೃತ್ವದ ನ್ಯಾಯಪೀಠ ತಿಳಿಸಿದೆ. ಜನರಿಗೆ ಸರಿಯಾಗಿ ಚಿಕಿತ್ಸೆ ದೊರಕಿಸಿಕೊಡಲು ಇಡೀ ದೇಶಕ್ಕೆ ಅನ್ವಯವಾಗುವ ರಾಷ್ಟ್ರೀಯ ಯೋಜನೆ ರೂಪಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಮಹತ್ವದ ನಿರ್ದೇಶನ ನೀಡಲಾಗಿದೆ.
ಅದೇ ರೀತಿ ಕರ್ನಾಟಕ ಹೈಕೋರ್ಟ್, ಬಾಂಬೆ ಹೈಕೋರ್ಟ್, ಅಲಹಾಬಾದ್ ಹೈಕೋರ್ಟ್ ಹಾಗೂ ದೆಹಲಿ ಹೈಕೋರ್ಟ್ ಗಳು ಕೂಡ ಮಧ್ಯಪ್ರವೇಶಿಸಿ ಅಗತ್ಯ ಕ್ರಮಕೈಗೊಳ್ಳಲು ಸರ್ಕಾರಗಳಿಗೆ ತಿಳಿಸಿವೆ.