ನವದೆಹಲಿ: ಕೇಂದ್ರೀಯ ಔಷಧ ಪ್ರಾಧಿಕಾರ ತಜ್ಞರ ಸಮಿತಿ ಶಿಫಾರಸು ಮಾಡಿದ 2 ಕೊರೋನಾ ತಡೆ ಲಸಿಕೆಗಳ ಬಳಕೆಗೆ ಕೇಂದ್ರ ಸರ್ಕಾರ ಸಮ್ಮತಿಸಿದೆ.
ಡಿಸಿಜಿಐ ಅಧ್ಯಕ್ಷ ವಿ.ಜಿ. ಸೋಮಾನಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ್ದಾರೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆಗೆ ಒಪ್ಪಿಗೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಪುಣೆಯ ಸೀರಮ್ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾ ಭಾರತದಲ್ಲಿ ಕೋವಿಶೀಲ್ಡ್ ಲಸಿಕೆ ಉತ್ಪಾದಿಸುತ್ತದೆ. ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಮತ್ತು ಆಸ್ಟ್ರಝೆನಿಕಾ ಈ ಲಸಿಕೆ ಅಭಿವೃದ್ಧಿಪಡಿಸಿವೆ.
ಹೈದರಾಬಾದ್ ನ ಭಾರತ್ ಬಯೋಟೆಕ್ ಸಂಸ್ಥೆ ಕೊವ್ಯಾಕ್ಸಿನ್ ಲಸಿಕೆ ಅಭಿವೃದ್ಧಿಪಡಿಸಿದೆ. ಕ್ರಿನಿಕಲ್ ಹಂತದ ಪ್ರಯೋಗದಲ್ಲಿ ಯಶಸ್ವಿಯಾದ ಈ ಲಸಿಕೆಗಳ ಬಳಕೆಗೆ ಅನುಮೋದನೆ ನೀಡಲಾಗಿದೆ.