ಬೆಂಗಳೂರು: ರಾಜ್ಯದ ಮೂರು ಮಹಾನಗರ ಪಾಲಿಕೆಗಳಿಗೆ ಇಂದು ಚುನಾವಣೆ ನಡೆಯಲಿದೆ. ಬೆಳಗಾವಿ, ಕಲಬುರ್ಗಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗಳಿಗೆ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿ ಮತದಾನ ನಡೆಯಲಿದ್ದು, ಸೆಪ್ಟಂಬರ್ 6 ರಂದು ಚುನಾವಣೆಯ ಫಲಿತಾಂಶ ಪ್ರಕಟಿಸಲಾಗುವುದು.
ಬೆಳಗಾವಿ ಮಹಾನಗರಪಾಲಿಕೆಯ 58 ವಾರ್ಡ್ ಗಳಿಗೆ ಚುನಾವಣೆ ನಡೆಯಲಿದ್ದು 385 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 4,28,364 ಮತದಾರರು ಮತ ಚಲಾವಣೆ ಮಾಡಲಿದ್ದು, 415 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 162 ಸೂಕ್ಷ್ಮ, 42 ಅತಿ ಸೂಕ್ಷ್ಮ ಮತಗಟ್ಟೆಗಳು ಇವೆ.
ಹುಬ್ಬಳ್ಳಿ -ಧಾರವಾಡ ಮಹಾನಗರಪಾಲಿಕೆಯ 82 ವಾರ್ಡ್ ಗಳಿಗೆ ಚುನಾವಣೆ ನಡೆಯಲಿದ್ದು, ಬಿಜೆಪಿ 82, ಕಾಂಗ್ರೆಸ್ 82 ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಜೆಡಿಎಸ್ 49, ಆದ್ಮಿ ಪಕ್ಷ 41, ಇತರರು 166 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 842 ಮತಗಟ್ಟೆ ಸ್ಥಾಪಿಸಲಾಗಿದೆ.
ಕಲಬುರಗಿ ಮಹಾನಗರ ಪಾಲಿಕೆಯ 55 ವಾರ್ಡ್ ಗಳಿಗೆ ಚುನಾವಣೆ ನಡೆಯಲಿದ್ದು, 300 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 5,19,464 ಮತದಾರರು ಮತ ಚಲಾವಣೆ ಮಾಡಲಿದ್ದಾರೆ.