ಬೆಂಗಳೂರು: ಅಬಕಾರಿ ಇಲಾಖೆ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಯಲ್ಲಿ ರಾಜಕೀಯ ಹಸ್ತಕ್ಷೇಪ, ಭ್ರಷ್ಟಾಚಾರ ತಡೆ ಉದ್ದೇಶದಿಂದ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ನಡೆಸಲು ಸರ್ಕಾರ ಮುಂದಾಗಿದೆ.
ಅಬಕಾರಿ ಇನ್ ಸ್ಪೆಕ್ಟರ್ ಗಳು ಸೇರಿದಂತೆ ಸಿ ಗುಂಪಿನ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗಾವಣೆಯನ್ನು ಕೌನ್ಸೆಲಿಂಗ್ ಮೂಲಕ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಸೇವಾ ನಿಯಮಗಳ ತಿದ್ದುಪಡಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಪ್ರಸಕ್ತ ವರ್ಷ ಅಬಕಾರಿ ಇಲಾಖೆ ಅಧಿಕಾರಿಗಳು ಸಿಬ್ಬಂದಿ ವರ್ಗಾವಣೆಯಲ್ಲಿ ಭಾರಿ ಭ್ರಷ್ಟಾಚಾರ ನಡೆದ ಆರೋಪ ಕೇಳಿ ಬಂದಿತ್ತು. 700 ಕೋಟಿ ರೂ. ಅಕ್ರಮ ನಡೆದಿದೆ ಎಂದು ಬಿಜೆಪಿ ಆರೋಪಿಸಿತ್ತು. ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರ ಕ್ರಮದಿಂದ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ನಡೆಸಲು ಸಿಎಂ ಎದುರು ಪ್ರಸ್ತಾವನೆ ಮಂಡಿಸಿದ್ದು, ಈ ಕುರಿತು ಕೆಲವು ಸಭೆ ನಡೆಸಲಾಗಿದೆ. ವರ್ಗಾವಣೆಗೆ ಸಂಬಂಧಿಸಿದ ನಿಯಮಗಳಿಗೆ ತಿದ್ದುಪಡಿ ತರಲು ತೀರ್ಮಾನಿಸಲಾಗಿದೆ.
ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಮಂಡಿಸಲು ಸಿದ್ಧತೆ ನಡೆಸಲಾಗಿದ್ದು, ರಾಜಕೀಯ ಹಸ್ತಕ್ಷೇಪ, ಭ್ರಷ್ಟಾಚಾರ ತಡೆಯುವ ಉದ್ದೇಶದಿಂದ ಅಬಕಾರಿ ಇನ್ ಸ್ಪೆಕ್ಟರ್ ಗಳು ಸೇರಿದಂತೆ ಇಲಾಖೆಯ ಸಿ ಗುಂಪಿನ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.