ಬೆಂಗಳೂರು: ನಿರುದ್ಯೋಗಿ ಯುವಕ-ಯುವತಿಯರನ್ನೇ ಟಾರ್ಗೆಟ್ ಮಾಡಿ ಸರ್ಕಾರಿ ಕೆಲಸ ಕೊಡಿಸುವುದಾಗಿ ಆಮಿಷವೊಡ್ಡಿ ವಂಚನೆಯೆಸಗುತ್ತಿದ್ದ ದಂಪತಿಯನ್ನು ಬೆಂಗಳೂರಿನ ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದಾರೆ.
ಸರ್ಕಾರಿ ಕೆಲಸದ ಆಸೆಯಿಂದ ಹಲವು ಯುವಕ-ಯುವತಿಯರು ದಂಪತಿಯಿಂದ ಲಕ್ಷಾಂತರ ರೂಪಾಯಿ ಕಳೆದುಕೊಂಡು ಮೋಸ ಹೋಗಿದ್ದಾರೆ. ಕೆಲಸಕ್ಕಾಗಿ ಅಲೆದಾಡುವ ಯುವಕ-ಯುವತಿಯರನ್ನೇ ಹುಡುಕಿ ಸರ್ಕಾರಿ ಕೆಲಸ ಕೊಡಿಸುತ್ತೇವೆ. ನಮಗೆ ದೊಡ್ಡ ದೊಡ್ಡ ರಾಜಕಾರಣಿಗಳ ಪರಿಚವಿದೆ. ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕ ಮಾಡಿಸುತ್ತೇವೆ ಎಂದು ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ಎಸ್ಕೇಪ್ ಆಗುತ್ತಿದ್ದರು. ಇದೇ ರೀತಿ ದಂಪತಿ 6 ಲಕ್ಷ ಮೋಸ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ದಂಪತಿಯಿಂದ ಮೋಸ ಹೋದ ಮೂವರು ವಿದ್ಯಾರಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ತನಿಖೆ ನಡೆಸಿದ ಪೊಲೀಸರು ದಂಪತಿಯನ್ನು ಬಂಧಿಸಿದ್ದಾರೆ. ಬಂಧಿತರನ್ನು ಪ್ರಕಾಶ್ ಹಾಗೂ ಮಧು ಪ್ರಕಾಶ್ ಎಂದು ಗುರುತಿಸಲಾಗಿದೆ. ಬಂಧಿತರಿಂದ 2 ಲಕ್ಷ ನಗದು ಹಣ, 4 ಫೋನ್, 6 ಬ್ಯಾಂಕ್ ಅಕೌಂಟ್, 16 ಕ್ರೆಡಿಟ್ ಹಾಗೂ ಡೆಬಿಟ್ ಕಾರ್ಡ್, 1 ದ್ವಿಚಕ್ರವಾಹನ. 11 ವಿವಿಧ ಕಂಪನಿಗಳ ವಾಚ್ ಸೇರಿದಂತೆ ವಿವಿಧ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ದಂಪತಿ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.