
ಬೆಂಗಳೂರು: ರಾಜ್ಯದ ಎಲ್ಲಾ ಕೋರ್ಟ್ ಹಾಲ್ ಗಳಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಅಳವಡಿಸಬೇಕು ಎಂದು ಕರ್ನಾಟಕ ನವ ಜಾಗೃತಿ ವೇದಿಕೆ ಆಗ್ರಹಿಸಿದೆ.
ಏಪ್ರಿಲ್ 14ರ ಅಂಬೇಡ್ಕರ್ ಜಯಂತಿಯೊಳಗೆ ಎಲ್ಲಾ ಕೋರ್ಟ್ ಹಾಲ್ ಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಅಳವಡಿಸಬೇಕು ಎಂದು ಒತ್ತಾಯಿಸಲಾಗಿದೆ.
ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಅವರ ಮನವಿಯಂತೆ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ನಿರ್ದೇಶನದ ಅನ್ವಯ ಎಲ್ಲಾ ಕೋರ್ಟ್ ಹಾಲ್ ಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಅಳವಡಿಸಲು ಆದೇಶ ಹೊರಡಿಸುವಂತೆ ಹೈಕೋರ್ಟ್ ಗೆ ಕಾನೂನು ಇಲಾಖೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದೆ. ಈ ನಿಟ್ಟಿನಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ನವ ಜಾಗೃತಿ ವೇದಿಕೆ ಅಧ್ಯಕ್ಷ ಅನಂತರಾಯಪ್ಪ ಕೋರಿದ್ದಾರೆ.
ಸಮಾಜ ಕಲ್ಯಾಣ ಇಲಾಖೆಯಲ್ಲಿ ಅಂಬೇಡ್ಕರ್ ಅವರ ಮಾದರಿ ಭಾವಚಿತ್ರ ಲಭ್ಯವಿದ್ದು, ನ್ಯಾಯಾಲಯಗಳ ಅವಶ್ಯಕತೆಗೆ ಅನುಗುಣವಾಗಿ ಪೂರೈಕೆ ಮಾಡಲಾಗುವುದು. ಅದರ ವೆಚ್ಚವನ್ನು ಕೂಡ ಭರಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಅವರು ಕಾನೂನು ಇಲಾಖೆಗೆ ಪತ್ರ ಬರೆದಿದ್ದಾರೆ. ಹೀಗಾಗಿ ಕೋರ್ಟ್ ಹಾಲ್ ಗಳಲ್ಲಿ ಅಂಬೇಡ್ಕರ್ ಅವರ ಫೋಟೋ ಅಳವಡಿಸಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.