ಶಿವಮೊಗ್ಗ: ಅಶ್ಲೀಲ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದ ಸೊರಬ ತಾಲೂಕಿನ ತಿಮ್ಮಪ್ಪ(42) ಎಂಬುವನಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 1.44 ಲಕ್ಷ ರೂಪಾಯಿ ದಂಡ ವಿಧಿಸಿದೆ.
ದಂಡ ಪಾವತಿಸಲು ವಿಳಂಬವಾದಲ್ಲಿ ಹೆಚ್ಚುವರಿ ಮೂರು ವರ್ಷ ಕಾಲ ಸೆರೆವಾಸ ಶಿಕ್ಷೆ ವಿಧಿಸಿ ಆದೇಶಿಸಲಾಗಿದೆ. ತಿಮ್ಮಪ್ಪ ಬಾಲಕರ ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದ. ಈ ಕುರಿತಾಗಿ ಸೈಬರ್ ಟಿಪ್ ಲೈನ್ ನಿಂದ ಬಂದ ದೂರು ಆಧರಿಸಿ ಶಿವಮೊಗ್ಗದ ಸೈಬರ್ ಕ್ರೈಂ ಪೋಲೀಸರು 2020ರ ಜನವರಿ 12 ರಂದು ಕೇಸ್ ದಾಖಲಿಸಿಕೊಂಡಿದ್ದರು.
ಸಿಇಎನ್ ಠಾಣೆಯ ಇನ್ಸ್ ಪೆಕ್ಟರ್ ಕೆ.ಟಿ. ಗುರುರಾಜ್ ತನಿಖೆ ನಡೆಸಿ ಆರೋಪಿತನ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಐಟಿ ಕಾಯ್ದೆಯಡಿ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಲತಾ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ವಕೀಲ ಹರಿಪ್ರಸಾದ್ ವಾದ ಮಂಡಿಸಿದ್ದರು.