ನವದೆಹಲಿ: ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಗಾಗಿ ಸಿ.ಪಿ ಯೋಗೇಶ್ವರ್ ಪ್ರಯತ್ನ ನಡೆಸಿದ್ದು, ಅವರ ಪರವಾಗಿ ಬಿಜೆಪಿಯ ಐದು ನಾಯಕರು ಬ್ಯಾಟಿಂಗ್ ಮಾಡಿದ್ದಾರೆ.
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಜೊತೆಗೆ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದ್ದಾರೆ. ನಂತರ ರಾಜ್ಯ ಉಸ್ತುವಾರಿ ರಾಧಾ ಮೋಹನದಾಸ್ ಅಗರ್ವಾಲ್ ಅವರನ್ನು ಭೇಟಿ ಮಾಡಿದ್ದಾರೆ. ಭೇಟಿಯ ವೇಳೆ ಸಿ.ಪಿ. ಯೋಗೇಶ್ವರ್ ಗೆ ಟಿಕೆಟ್ ಗಾಗಿ ಹೈಕಮಾಂಡ್ ಮೇಲೆ ಒತ್ತಡ ಹೇರುವಂತೆ ರಾಜ್ಯ ನಾಯಕರು ಮನವಿ ಮಾಡಿದ್ದಾರೆ.
ಚನ್ನಪಟ್ಟಣ ಕ್ಷೇತ್ರದಲ್ಲಿ ಯೋಗೇಶ್ವರ್ ಪರ ಅಲೆ ಇದೆ. ಅನುಕಂಪವೂ ಇದೆ. ಅವರಿಗೆ ಟಿಕೆಟ್ ನೀಡಿದರೆ ಉಪ ಚುನಾವಣೆ ಗೆಲ್ಲುವುದು ನಿಶ್ಚಿತ. ಕಾಂಗ್ರೆಸ್ ಗೆ ಸೋಲಿನ ರುಚಿ ತೋರಿಸಬಹುದು ಎಂದು ನಾಯಕರು ವಾದ ಮಂಡಿಸಿದ್ದಾರೆ.
ಚನ್ನಪಟ್ಟಣ ಕ್ಷೇತ್ರವನ್ನು ಹೆಚ್.ಡಿ. ಕುಮಾರಸ್ವಾಮಿ ಪ್ರತಿನಿಧಿಸಿದ್ದರು. ಹಾಗಾಗಿ ಚನ್ನಪಟ್ಟಣ ಅಭ್ಯರ್ಥಿ ಬಗ್ಗೆ ಕುಮಾರಸ್ವಾಮಿ ಜೊತೆ ಚರ್ಚಿಸುವುದು ಉತ್ತಮ. ಈ ನಿಟ್ಟಿನಲ್ಲಿ ಚರ್ಚೆ ನಡೆಸಿ ಯೋಗೇಶ್ವರ್ ಗೆ ಟಿಕೆಟ್ ನೀಡುವ ಬಗ್ಗೆ ತೀರ್ಮಾನಿಸಬೇಕೆಂದು ಮನವಿ ಮಾಡಲಾಗಿದೆ ಎನ್ನಲಾಗಿದೆ.
ಚನ್ನಪಟ್ಟಣ ಕ್ಷೇತ್ರದಲ್ಲಿ ಯೋಗೇಶ್ವರ್ ಸ್ಪರ್ಧೆ ಖಚಿತವಾಗಿದೆ. ಬಿಜೆಪಿಯಿಂದ ಸ್ಪರ್ಧಿಸಲು ಆಸಕ್ತರಾಗಿರುವ ಅವರು ಟಿಕೆಟ್ ಗಾಗಿ ಪ್ರಯತ್ನ ನಡೆಸಿದ್ದಾರೆ. ಬಿಜೆಪಿ ಟಿಕೆಟ್ ಸಿಗಲಿ, ಸಿಗದಿರಲಿ ಅವರ ಸ್ಪರ್ಧೆಯಂತೂ ನಿಶ್ಚಿತವೆನ್ನಲಾಗಿದೆ.