
ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 10 ಜನ ಕಾರ್ಮಿಕರು ಸಾವನ್ನಪ್ಪಿದ್ದಾರೆ.
ನವೀನ್ ಎಂಬುವರಿಗೆ ಸೇರಿದ ಪಟಾಕಿ ಗೋಡೌನ್ ನಲ್ಲಿ ಘಟನೆ ನಡೆದಿದೆ. ಗೋದಾಮಿನಲ್ಲಿ ಬೆಂಕಿಯ ಕೆನ್ನಾಲಿಗೆ 10 ಕಾರ್ಮಿಕರು ಸಜೀವ ದಹನವಾಗಿದ್ದಾರೆ. ಲಾರಿಯಲ್ಲಿ ತರಲಾಗಿದ್ದ ಪಟಾಕಿ ಗೋದಾಮಿನಲ್ಲಿ ಪಟಾಕಿ ಅನ್ ಲೋಡ್ ಮಾಡುವ ವೇಳೆ ಬೆಂಕಿ ಹೊತ್ತಿಕೊಂಡಿದೆ.
ಗೋದಾಮಿನಲ್ಲಿ 20ಕ್ಕೂ ಅಧಿಕ ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ. ಮಧ್ಯಾಹ್ನ 3 ಗಂಟೆ ಸುಮಾರಿಗೆ ಹೊತ್ತಿಕೊಂಡ ಬೆಂಕಿ ಸಂಜೆಯವರೆಗೂ ಇಡೀ ಕಟ್ಟಡಕ್ಕೆ ವ್ಯಾಪಿಸಿ ಹೊತ್ತಿ ಉರಿದಿದೆ.
ಘಟನೆಯಲ್ಲಿ ಕಾರ್ಮಿಕರು ಸಜೀವ ದಹನವಾಗಿದ್ದು, ಸುಟ್ಟು ಕರಕಲಾದ ಮೃತದೇಹಗಳನ್ನು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಎಸ್,ಪಿ, ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.