ನವದೆಹಲಿ: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ಸಂತ್ರಸ್ತ ರೈತರ ಸಂಕಷ್ಟ ನಿವಾರಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ 17,901 ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಕೋರಿ ರಾಜ್ಯ ಸರ್ಕಾರ ಮನವಿ ಸಲ್ಲಿಸಿದೆ.
ಗುರುವಾರ ಕೇಂದ್ರ ಕೃಷಿ ಕಾರ್ಯದರ್ಶಿ ಮನೋಜ್ ಕುಮಾರ್ ಅಹುಜಾ, ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾಲ್ಲ ಅವರೊಂದಿಗೆ ಪ್ರತ್ಯೇಕ ಸಭೆ ನಡೆಸಿದ ರಾಜ್ಯದ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಗ್ರಾಮೀಣ ಅಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಒಳಗೊಂಡ ನಿಯೋಗ ರಾಜ್ಯದ ಭೀಕರ ಪರಸ್ಥಿತಿ ಕುರಿತು ಮಾಹಿತಿ ನೀಡಿದೆ.
ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು, ಅಂದಾಜು ಪರಿಹಾರ ನಿಧಿಯಲ್ಲಿ 17,9001 ಕೋಟಿ ರೂ. ನಲ್ಲಿ ರಾಜ್ಯ ಸರ್ಕಾರ ಮೊದಲ ಬಾರಿಗೆ 90 ದಿನಗಳ ಬರದಿಂದ ತೀವ್ರವಾಗಿ ಹಾನಿಗೊಳಗಾದ ಕುಟುಂಬಗಳಿಗೆ 12,577 ಕೋಟಿ ರೂ. ಪರಿಹಾರಕ್ಕೆ ಮನವಿ ಮಾಡಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಸುಮಾರು 45.55 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿನ ಕೃಷಿ ಮತ್ತು ತೋಟಗಾರಿಕೆ ಬೆಳೆ ನಷ್ಟವಾಗಿದೆ. 90 ದಿನಗಳ ನಿರಂತರ ಬರದಿಂದ ಜನ ಜೀವನದ ಮೇಲೆ ನೇರ ಪರಿಣಾಮ ಬೀರಿದೆ. ಹೀಗಾಗಿ 12,577 ಕೋಟಿ ರೂ. ಅನಪೇಕ್ಷಿತ ಪರಿಹಾರ ನೀಡಬೇಕು. ಕೃಷಿ ಮತ್ತು ತೋಟಗಾರಿಕೆ ಬೆಳೆ ನಷ್ಟ ಪರಿಹಾರವಾಗಿ 44 ಕೋಟಿ ರೂ. ಕೊಡಬೇಕು ಎಂದು ಒತ್ತಾಯಿಸಿದ್ದಾರೆ.