ನವದೆಹಲಿ: ಸಿ.ಆರ್.ಪಿ.ಎಫ್.ನಲ್ಲಿ ಖಾಲಿ ಇರುವ 9212 ಹುದ್ದೆಗಳ ನೇಮಕಾತಿಗೆ ಕೇಂದ್ರ ಸರ್ಕಾರ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ಕೇವಲ ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತ್ರವೇ ಬರೆಯಬಹುದು ಎಂದು ಷರತ್ತು ವಿಧಿಸಲಾಗಿದೆ.
ದಕ್ಷಿಣ ಭಾರತದ ರಾಜ್ಯಗಳ ಮೇಲೆ ಕೇಂದ್ರ ಸರ್ಕಾರ ಹಿಂದಿ ಹೇರಿಕೆ ಮಾಡುತ್ತಿದೆ ಎನ್ನುವ ಆರೋಪಗಳ ನಡುವೆ ಕರ್ನಾಟಕದಲ್ಲಿ ಖಾಲಿ ಇರುವ 466 ಹಾಗೂ ತಮಿಳುನಾಡಿನ 579 ಹುದ್ದೆಗಳಿಗೆ ಹಿಂದಿ, ಇಂಗ್ಲಿಷ್ ನಲ್ಲಿ ಕಂಪ್ಯೂಟರ್ ನಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದ್ದು, ಹಿಂದಿ ಹೇರಿಕೆಗೆ ಅಭ್ಯರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾಷೆ ಗೊತ್ತಿಲ್ಲದ ಪ್ರಾದೇಶಿಕ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತದೆ ಎನ್ನುವ ಆರೋಪ ಕೇಳಿ ಬಂದಿದ್ದು, ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿಯೂ ಪರೀಕ್ಷೆಗೆ ಅವಕಾಶ ನೀಡಲು ಆಗ್ರಹಿಸಲಾಗಿದೆ. ಕೇಂದ್ರ ಸರ್ಕಾರಕ್ಕೆ ತಮಿಳುನಾಡು ಮುಖ್ಯಮಂತ್ರಿ ಪತ್ರ ಬರೆದು ಪ್ರಾದೇಶಿಕ ಭಾಷೆಯಲ್ಲಿ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕೆಂದು ಒತ್ತಾಯಿಸಿದ್ದಾರೆ.