ಮಂಡ್ಯ: ರಾಜ್ಯದಲ್ಲಿ ಕಾವೇರಿ ಕಿಚ್ಚಿನ ನಡುವೆಯೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)ದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದ್ದು, ಅ.15ರವರೆಗೆ ತಮಿಳುನಾಡಿಗೆ ಪ್ರತಿದಿನ 3000 ಕ್ಯೂಸೆಕ್ ನೀರು ಹರಿಸುವಂತೆ ಆದೇಶ ನೀಡಿದೆ.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಹೊರ ಬೀಳುತ್ತಿದ್ದಂತೆ ರಾಜ್ಯದಲ್ಲಿ ಪ್ರತಿಭಟನೆಗಳು ಮತ್ತಷ್ಟು ಭುಗಿಲೆದ್ದಿವೆ. ಮಂಡ್ಯದಲ್ಲಿ ರೈತಪರ ಸಂಘಟನೆಗಳು ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿವೆ. ರೈತರ ಪ್ರತಿಭಟನೆಗೆ ಕನ್ನಡ ಪರ ಸಂಘಟನೆಗಳು ಸಾಥ್ ನೀಡಿವೆ.
ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ಈಗಾಗಲೇ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು, ರಾಜ್ಯಾದ್ಯಂತ ಪ್ರತಿಭಟನೆಗಳು ನಡೆದಿದೆ. ಇದೇ ವೇಳೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಸಿಡಬ್ಲುಆರ್ ಸಿ ಆದೇಶ ಪಾಲಿಸುವಂತೆ ಸೂಚಿಸಿರುವುದು ರೈತರ ಆಕ್ರೋಶ ಇನ್ನಷ್ಟು ಹೆಚ್ಚುವಂತೆ ಮಾಡಿದೆ.