ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತಗೊಂಡು ಚಂಡಮಾರುತ ಸೃಷ್ಟಿಯಾಗಿದ್ದು, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮತ್ತೆ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ 10 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಮುಂಜಾಗೃತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಕೊಡಗು, ಮೈಸೂರು, ಮಂಡ್ಯ, ರಾಮನಗರ, ಚಿತ್ರದುರ್ಗ, ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.
ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48ಗಂಟೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.