ನವದೆಹಲಿ: ಹವಾಮಾನ ಇಲಾಖೆಯಿಂದ ಮತ್ತೊಂದು ಆಘಾತಕಾರಿ ಮಾಹಿತಿ ನೀಡಲಾಗಿದೆ. ನಾಳೆಯಿಂದ ನಿವಾರ್ ಚಂಡಮಾರುತ ಅಬ್ಬರ ಹೆಚ್ಚಾಗಲಿದೆ.
ತಮಿಳುನಾಡು, ಆಂಧ್ರಪ್ರದೇಶ, ಪುದುಚೇರಿ ಕರಾವಳಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ದಕ್ಷಿಣ ಭಾರತದ ರಾಜ್ಯಗಳಿಗೆ ತೀವ್ರ ಹಾನಿಯಾಗುವ ಸಾಧ್ಯತೆ ಇದೆ. ತಮಿಳುನಾಡು, ಕರ್ನಾಟಕ ಭಾಗಗಳು ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಿಗೆ ನವೆಂಬರ್ 25 ರಂದು ನಿವಾರ್ ಚಂಡಮಾರುತ ಅಪ್ಪಳಿಸಲಿದೆ.
ತಮಿಳುನಾಡಿನಲ್ಲಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದ್ದು, ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಎನ್.ಡಿ.ಆರ್.ಎಫ್. ತಂಡಗಳನ್ನು ಸನ್ನದ್ಧ ಸ್ಥಿತಿಯಲ್ಲಿಡಲಾಗಿದೆ. ಸುಮಾರು 100 ರಿಂದ 120 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಭಾರಿ ಮಳೆಯಾಗಲಿದೆ. ವಾಯುಭಾರ ಕುಸಿತದ ಪರಿಣಾಮ ಭಾರೀ ಮಳೆಯಾಗಲಿದ್ದು, ನಿವಾರ್ ಚಂಡಮಾರುತ ತೀವ್ರ ಆತಂಕ ಮೂಡಿಸಿದೆ.
ನವೆಂಬರ್ 25 ರ ಮಧ್ಯಾಹ್ನ ಪುದುಚೇರಿ, ತಮಿಳುನಾಡು ಕರಾವಳಿಗೆ ಚಂಡಮಾರುತ ಅಪ್ಪಳಿಸಲಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲಾಗಿದೆ. ಇನ್ನು ಅನೇಕ ಕಡೆ ಕಟಾವಿಗೆ ಬಂದಿರುವ ಬೆಳೆಯನ್ನು ಉಳಿಸಿಕೊಳ್ಳುವುದೇ ರೈತರಿಗೆ ದೊಡ್ಡ ಸವಾಲಾಗಿದೆ.