ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪಕ್ಷದ ಸಂಘಟನೆಗೆ ಹೊಸ ಸ್ವರೂಪ ನೀಡಲು ಕ್ರಮ ಕೈಗೊಂಡಿದ್ದು, ದೆಹಲಿಯಲ್ಲಿ ಪಕ್ಷದ ನಾಯಕರನ್ನು ಭೇಟಿಯಾಗಿ ಸಮಾಲೋಚನೆ ನಡೆಸಲಿದ್ದಾರೆ.
ಶನಿವಾರ ರಾತ್ರಿಯೇ ದೆಹಲಿಗೆ ತೆರಳಿದ ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಸೇರಿದಂತೆ ಹಲವು ನಾಯಕರನ್ನು ಭೇಟಿ ಮಾಡಲಿದ್ದಾರೆ.
ಭೇಟಿಯ ಸಂದರ್ಭದಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ಬಲ ತುಂಬಲು ಪದಾಧಿಕಾರಿಗಳ ಪಟ್ಟಿ ಬದಲಿಸಿ ತಂಡವನ್ನು ಪುನಾರಚನೆ ಮಾಡುವ ಬಗ್ಗೆ ನಾಯಕರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಇನ್ನು ಪದೇ ಪದೇ ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಎಂದು ಹೇಳುತ್ತಿರುವ ಜಮೀರ್ ಅಹ್ಮದ್ ಬಗ್ಗೆಯೂ ಪ್ರಸ್ತಾಪಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ರಾಹುಲ್ ಗಾಂಧಿ ಹುಟ್ಟುಹಬ್ಬಕ್ಕೆ ಶುಭ ಕೋರಲು ದೆಹಲಿಗೆ ತೆರಳಿದ ಡಿ.ಕೆ. ಶಿವಕುಮಾರ್, ರಾಜ್ಯದಲ್ಲಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ. ಜೊತೆಗೆ ಬಿಜೆಪಿಯಲ್ಲಿ ನಡೆದಿರುವ ಬೆಳವಣಿಗೆಗಳ ಬಗ್ಗೆಯೂ ಚರ್ಚಿಸುವ ಸಾಧ್ಯತೆ ಇದೆ.
ಚುನಾವಣೆ ದೂರವಿದ್ದರೂ ಶಾಸಕ ಜಮೀರ್ ಅಹಮದ್ ಹೋದಲ್ಲೆಲ್ಲ ಸಿದ್ದರಾಮಯ್ಯ ಭಾವಿ ಮುಖ್ಯಮಂತ್ರಿ ಎಂದು ಹೇಳುತ್ತಿರುವುದರಿಂದ ಪಕ್ಷದ ಸಂಘಟನೆಗೆ ತೊಂದರೆಯಾಗಲಿದೆ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಲಿದ್ದೇವೆ. ಸಿಎಂ ಯಾರು ಎಂದು ಹೈಕಮಾಂಡ್ ನಿರ್ಧಾರ ಮಾಡುತ್ತದೆ, ಆದರೆ, ಜಮೀರ್ ಅಹ್ಮದ್ ಪದೇಪದೇ ಸಿಎಂ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ. ಕಾಂಗ್ರೆಸ್ ವರಿಷ್ಠರ ಗಮನಕ್ಕೆ ಡಿಕೆಶಿ ಈ ವಿಚಾರವನ್ನು ತರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.