ಕೊಪ್ಪಳ: ರಾಜ್ಯದಲ್ಲಿ ಮತ್ತೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುತ್ತಾರೆ. ಈ ವಿಚಾರದಲ್ಲಿ ನನಗೆ 100 ಕ್ಕೆ 200 ರಷ್ಟು ನಂಬಿಕೆಯಿದೆ ಎಂದು ಕೊಪ್ಪಳದಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ್ ಹೇಳಿದ್ದಾರೆ.
ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಆಗಬೇಕು. ಜನರು ಕೂಡ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಬೇಕು ಎಂದು ಬಯಸಿದ್ದಾರೆ. ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಒಬ್ಬರೇ ಅಲ್ಲ, ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರು ಕೂಡ ಇದನ್ನೇ ಹೇಳುತ್ತಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕೆಂದು ಅವರೆಲ್ಲರೂ ಬಯಸಿದ್ದಾರೆ ಎಂದು ತಿಳಿಸಿದ್ದಾರೆ.
ಕೊರೋನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಈ ಸಮಯದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದರೆ ಪೂರಕ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದರು. ಸಿದ್ದರಾಮಯ್ಯ ಸಿಎಂ ಆಗಿಲ್ಲವೆಂಬ ಕೊರಗು ಜನರಲ್ಲಿದೆ. ಡಿ.ಕೆ. ಶಿವಕುಮಾರ್ ಅಧ್ಯಕ್ಷರಾಗಿ ಪಕ್ಷದ ಹಿತದೃಷ್ಟಿಯಿಂದ ಇಂತಹ ಮಾತನ್ನು ಹೇಳಿದ್ದಾರೆ. ರಾಜ್ಯದಲ್ಲಿ ಮತ್ತೆ ಒಳ್ಳೆಯ ಯೋಜನೆಗಳು ಬೇಕಾದರೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ನಾಯಕತ್ವ ಗೊಂದಲ ಇಲ್ಲ ಎಂದು ರಾಘವೇಂದ್ರ ಹಿಟ್ನಾಳ್ ತಿಳಿಸಿದ್ದಾರೆ.
ಸಿದ್ಧರಾಮಯ್ಯ ಮುಂದಿನ ಸಿಎಂ ಎಂದು ಶಾಸಕ ಜಮೀರ್ ಅಹಮ್ಮದ್ ಹೇಳಿದ್ದಕ್ಕೆ ಡಿ.ಕೆ. ಶಿವಕುಮಾರ್ ಗರಂ ಆಗಿದ್ದು, ಹದ್ದುಬಸ್ತಿನಲ್ಲಿರಲು ಹೇಳಿದ್ದೇನೆ, ವಿವರಣೆ ಪಡೆದಿದ್ದೇನೆ ಎಂದಿದ್ದರು. ಇದು ನನ್ನ ವೈಯಕ್ತಿಕ ಹೇಳಿಕೆ ಎಂದು ಜಮೀರ್ ಸ್ಪಷ್ಟನೆ ನೀಡಿ, ಯಾವ ವಿವರಣೆ ಕೇಳಿಲ್ಲ ಎಂದು ತಿಳಿಸಿದ್ದರು. ಸಿಎಂ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಸಿದ್ಧರಾಮಯ್ಯ ತಿಳಿಸಿದ್ದಾರೆ. ಇವೆಲ್ಲ ಹೇಳಿಕೆಗಳ ನಂತರ ಇಂದು ರಾಘವೇಂದ್ರ ಹಿಟ್ನಾಳ್ ಅವರು ಸಿದ್ಧರಾಮಯ್ಯ ಸಿಎಂ ಆಗಲಿದ್ದಾರೆ ಎಂದು ಹೇಳಿರುವುದು ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ವಿಚಾರದ ಚರ್ಚೆ ಕಾವೇರಿದಂತಾಗಿದೆ.