ಬೆಂಗಳೂರು: ಜೆಡಿಎಸ್ ಪಕ್ಷದ ನಾಯಕ ಮಧು ಬಂಗಾರಪ್ಪ ಕಾಂಗ್ರೆಸ್ ಸೇರುವ ಸಾಧ್ಯತೆ ದಟ್ಟವಾಗಿದೆ. ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸ್ಥಾನ ಕಳೆದುಕೊಂಡ ನಂತರ ಹಿನ್ನೆಲೆಗೆ ಸರಿದಿದ್ದ ಮಧು ಬಂಗಾರಪ್ಪ ಕಾಂಗ್ರೆಸ್ ಸೇರಲಿದ್ದಾರೆ ಎನ್ನಲಾಗಿದೆ.
ಅವರು ಈ ಹಿಂದೆಯೇ ಕಾಂಗ್ರೆಸ್ ಸೇರಲಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತಾದರೂ ಅವರೇ ಅದನ್ನು ಅಲ್ಲಗಳೆದಿದ್ದರು. ಡಿ.ಕೆ. ಶಿವಕುಮಾರ್ ಅವರೊಂದಿಗೆ ತಂದೆಯವರ ಕಾಲದಿಂದಲೂ ಉತ್ತಮ ಬಾಂಧವ್ಯ ಹೊಂದಿರುವ ಮಧು ಬಂಗಾರಪ್ಪ ಹಿಂದೆ ಲೋಕಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲದೊಂದಿಗೆ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಅವರ ಪರವಾಗಿ ಡಿ.ಕೆ. ಶಿವಕುಮಾರ್ ಪ್ರಚಾರ ನಡೆಸಿದ್ದರು.
ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ ಮಧು ಬಂಗಾರಪ್ಪ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ. ಪುತ್ರಿಯ ಮದುವೆ ಕಾರ್ಯದಲ್ಲಿ ಬ್ಯುಸಿಯಾಗಿರುವ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದ ಮಧು ಬಂಗಾರಪ್ಪ ಸುದೀರ್ಘ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ.
ಮಧು ಬಂಗಾರಪ್ಪ ಜೆಡಿಎಸ್ ತೊರೆಯುವುದು ನಿಶ್ಚಿತವಾಗಿದ್ದು, ಇನ್ನೊಂದು ವಾರದಲ್ಲಿ ಅವರು ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಾಹಿತಿ ಹೊರಬೀಳುವ ಸಾಧ್ಯತೆ ಇದೆ. ಸೊರಬ ಕ್ಷೇತ್ರದಲ್ಲಿ ಬೆಂಬಲಿಗರೊಂದಿಗೆ ಸಮಾಲೋಚನೆ ನಡೆಸಿ ಮಧು ಬಂಗಾರಪ್ಪ ಮುಂದಿನ ಹೆಜ್ಜೆ ಇಡಲಿದ್ದಾರೆ ಎಂದು ಹೇಳಲಾಗಿದೆ.