ಬೆಂಗಳೂರು: ರಾಜ್ಯದ ಬಿಜೆಪಿ ಸರ್ಕಾರ ಅಧಿಕಾರಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರ ಮೇಲೆ ಸುಳ್ಳು ಕೇಸು ಹಾಕಿಸಿ, ದೌರ್ಜನ್ಯ ನಡೆಸುತ್ತಿದೆ. ಇದನ್ನು ಖಂಡಿಸಿ ಇದೇ 13 ರಂದು ‘ಶಿವಮೊಗ್ಗ ಚಲೋ’ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ನಮ್ಮ ಪಕ್ಷದ ಶಾಸಕ ಸಂಗಮೇಶ್, ಅವರ ಕುಟುಂಬ ಸದಸ್ಯರು ಹಾಗೂ ಕಾರ್ಯಕರ್ತರ ಮೇಲೆ ಸುಳ್ಳು ಕೇಸು ಹಾಕಲಾಗಿದೆ. ಅವರನ್ನು ಬಿಜೆಪಿಗೆ ಸೆಳೆಯಲು ಬಹಳ ಒತ್ತಡ ಹೇರಿದ್ದರು. ಆದರೂ ಇವರು ಆಪರೇಷನ್ ಕಮಲಕ್ಕೆ ಬಲಿಯಾಗಲಿಲ್ಲ ಎಂಬ ಕಾರಣಕ್ಕೆ ಈ ರೀತಿ ಕಿರುಕುಳ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಒಬ್ಬ ಕಾಂಗ್ರೆಸ್ ಶಾಸಕ ಇದ್ದಾನೆ ಎಂದು ಪೊಲೀಸರ ಕೈಯಲ್ಲಿ ಎಫ್ಐಆರ್ ಹಾಕಿಸಿ, ತೊಂದರೆ ನೀಡುತ್ತಿದ್ದಾರೆ ಎಂದು ದೂರಿದ್ದಾರೆ.
ತಮಗಾಗುತ್ತಿರುವ ಅನ್ಯಾಯದ ವಿರುದ್ಧ ಮಾತನಾಡಲು ಅವಕಾಶ ಕೊಡಿ ಎಂದು ಕೇಳಿದರೆ ಸಂಗಮೇಶ್ ಅವರಿಗೆ ಅವಕಾಶ ನೀಡಲಿಲ್ಲ. ಆಗ ನೋವಿನಿಂದ ನಮ್ಮ ಶಾಸಕ ತಮ್ಮ ಶರ್ಟ್ ಬಿಚ್ಚಿ ಮೈಮೇಲಾಗಿರುವ ಗಾಯ ತೋರಿಸಲು ಮುಂದಾದಾಗ, ಅದನ್ನು ಅಸಭ್ಯ ವರ್ತನೆ ಎಂದು ಹೇಳಿ ಅವರನ್ನು ಒಂದು ವಾರಕ್ಕೂ ಹೆಚ್ಚು ಕಾಲ ವಿಧಾನಸಭೆ ಕಲಾಪದಿಂದ ಅಮಾನತು ಮಾಡಲಾಗಿದೆ. ಆ ಮೂಲಕ ಅವರ ಹಕ್ಕಿಗೆ ಧಕ್ಕೆ ತರಲಾಗಿದೆ. ಈ ಬಗ್ಗೆ ನಾವು ಪ್ರತಿಭಟನೆ ಮಾಡಿದ್ದೇವೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ 13 ರಂದು ವಿರೋಧ ಪಕ್ಷ ನಾಯಕರ ಸಮ್ಮುಖದಲ್ಲಿ ಎಲ್ಲ ನಾಯಕರು, ಶಾಸಕರು, ಸಂಸದರು, ಕಾರ್ಯಕರ್ತರು ಶಿವಮೊಗ್ಗ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಶಿವಮೊಗ್ಗಕ್ಕೆ ತೆರಳಿ ಪ್ರತಿಭಟನೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.