ಬೆಂಗಳೂರು: ಕಾಂಗ್ರೆಸ್ ನಾಯಕರಿಗೆ ಉದ್ಯೋಗವಿಲ್ಲದಂತಾಗಿದೆ. ಹೀಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ಟೀಕಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಉದ್ಯೋಗವಿಲ್ಲ. ನಿರುದ್ಯೋಗಿಗಳಾಗಿರುವ ಅವರು ಉದ್ಯೋಗ ಹುಡುಕಿಕೊಂಡು ಅಲೆದಾಡುತ್ತಿದ್ದಾರೆ. ಪ್ರತಿಭಟನೆಯ ಉದ್ದೇಶದಿಂದಲೇ ಪ್ರತಿಭಟನೆ ಮಾಡಿದ್ದಾರೆ ಹೊರತು ಇದರಲ್ಲಿ ಯಾವ ಹುರುಳಿಲ್ಲ ಎಂದು ಟೀಕಿಸಿದ್ದಾರೆ.
ಇದಕ್ಕೆ ಡಿ.ಕೆ. ಶಿವಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದು, ನಾವು ನಿರುದ್ಯೋಗಿಗಳು, ರಾಜ್ಯ ಸರ್ಕಾರ ಏನು ಮಾಡುತ್ತಿದೆ. ಡಬಲ್ ಇಂಜಿನ್ ಸರ್ಕಾರ ಏನು ಮಾಡುತ್ತಿದೆ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.
ಜನರನ್ನೆಲ್ಲ ನಿರುದ್ಯೋಗಿಗಳಾಗಿ ಮಾಡಿದ್ದಾರೆ. ಜನರ ಧ್ವನಿಯಾಗಿ ನಾವು ಹೋರಾಟ ನಡೆಸಿದ್ದೇವೆ. ತೈಲ ಬೆಲೆ ಕಡಿಮೆಯಾಗಿದ್ದರೂ ಸರ್ಕಾರ ಬೆಲೆ ಇಳಿಸದೇ ಲಾಭ ಮಾಡಿಕೊಳ್ಳುತ್ತಿದ್ದು ಜನಸಾಮಾನ್ಯರಿಗೆ ಹೊರೆಯಾಗಿದೆ. ರೈತರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಇದು ದೇಶಕ್ಕೆ ಅಪಾಯ, ಅವರ ಬೇಡಿಕೆಯನ್ನು ಕೂಡಲೇ ಈಡೇರಿಸಬೇಕು ಎಂದು ಆಗ್ರಹಿಸಿದ್ದಾರೆ.