ಬೆಂಗಳೂರು: ಮುಡಾ ಹಗರಣ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಪಾದಯಾತ್ರೆ ವಿಚಾರವಗಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಬಿಜೆಪಿಯ ಪಾದಯಾತ್ರೆಗೆ ಅರ್ಥವೂ ಇಲ್ಲ, ವಿಷಯವೂ ಇಲ್ಲ ಎಂದು ಲೇವಡಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ಅವರ ಪಾದಯಾತ್ರೆ ವಿಚಾರ ಏನು? ಅವರು ಮಾಡಿರುವ ಹಗರಣಗಳನ್ನು ಬಯಲು ಮಾಡಿಕೊಳ್ಳುವುದಕ್ಕೆ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ. ನಮ್ಮ ಸರ್ಕಾರದ ಅವಧಿಯಲ್ಲಿ ಯಾವುದಾದರೂ ಹೊಸ ಹಗರಣಗಳಿದ್ದರೆ ಅವರು ಹೇಳಲಿ. ರಾಜ್ಯದ ಇತಿಹಾಸದಲ್ಲೇ ಅತ್ಯಂತ ಭ್ರಷ್ಟ ಸರ್ಕಾರ ಎಂದರೆ ಅದು ಬಿಜೆಪಿ ಸರ್ಕಾರ. ಹೀಗಾಗಿ ನಾವು ಅವರ ಕಾಲದ ಹಗರಣಗಳ ಬಗ್ಗೆ, ಬಜೆಟ್ ನಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯಗಳ ಬಗ್ಗೆ ಪ್ರತಿನಿತ್ಯ ಮೂರ್ನಾಲ್ಕು ಪ್ರಶ್ನೆ ಕೇಳುತ್ತೇವೆ, ಅವರು ಉತ್ತರ ನೀಡಲಿ ಎಂದರು.
ಪಾದಯಾತ್ರೆ ಮಾಡಿದರೆ ಜೆಡಿಎಸ್ ನೆಲೆ ಕಳೆದುಕೊಳ್ಳುತ್ತದೆ ಎಂದು ಅವರು ಅದನ್ನು ಉಳಿಸಿಕೊಳ್ಳಲು ಪ್ರಯತ್ನಿಸಿದರು. ಆದರೆ ಜೆಡಿಎಸ್ ನವರನ್ನು ಹೆದರಿಸಿ, ಬೆದರಿಸಿ ಪಾದಯಾತ್ರೆಗೆ ಒಪ್ಪಿಸಿದ್ದಾರೆ. ಜೆಡಿಎಸ್ ಪಾದಯಾತ್ರೆಗೆ ಒಪ್ಪಿಗೆಯ ಗುಟ್ಟು ಏನು ಎಂದು ಹೇಳಬೇಕು ಎಂದರು.
ಇನ್ನು ಸಂವಿಧಾನಿಕ ಸಂಸ್ಥೆಗಳು ಯಾವ ರೀತಿ ವರ್ತಿಸುತ್ತಿವೆ ಎಂದು ನೀವೆಲ್ಲರೂ ನೋಡುತ್ತಿದ್ದೀರಿ. ತನಿಖೆ ಹೆಸರಲ್ಲಿ ಅಧಿಕಾರಿಗಳಿಗೆ ಒತ್ತಡ ಹಾಕಿ ಮುಖ್ಯಮಂತ್ರಿ, ನನ್ನ ಹೆಸರು ಹೇಳುವಂತೆ ಬೆದರಿಸುವುದು ನಡೆಯುತ್ತಿದೆ. ಸಿಬಿಐ ಏನೇನು ಮಾಡುತ್ತಿದೆ ಎಂಬ ಪಟ್ಟಿ ನನ್ನ ಬಳಿ ಇದೆ. ನಿಧಾನವಾಗಿ ಅದರ ಬಗ್ಗೆ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದರು.