ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದ್ದು, ಇದನ್ನೇ ಅಸ್ತ್ರವನ್ನಾಗಿ ಮಾಡಿಕೊಂಡಿರುವ ವಿಪಕ್ಷಗಳು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿವೆ. ಸೋಮವಾರ ಪ್ರತಿಭಟನೆಗೂ ಮುಂದಾಗಿವೆ. ವಿಪಕ್ಷಗಳ ಟೀಕೆಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ನೀರಿನ ಅಭಾವದ ಬಗ್ಗೆ ವಿಪಕ್ಷಗಳು ರಾಜಕೀಯ ಟೀಕೆ ಬಿಟ್ಟು ರಚನಾತ್ಮಕ ಸಲಹೆ ಕೊಟ್ಟರೆ ಸ್ವೀಕರಿಸಲು ಸಿದ್ಧ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ವಿಪಕ್ಷದವರಿಗೆ ಟೀಕೆ ಮಾಡುವುದು ಬಿಟ್ಟು ಬೇರೆ ಇನ್ನೇನೂ ಇಲ್ಲ. ಅವರು ರಚನಾತ್ಮಕ ಸಲಹೆ ಕೊಟ್ಟರೆ ನಾವು ಸ್ವೀಕರಿಸಲು ಸಿದ್ಧ. ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಟ್ಯಾಂಕರ್ ಹಾಗೂ ಖಾಸಗಿಯವರನ್ನು ಸರ್ಕಾರ ತನ್ನ ಸುಪರ್ದಿಗೆ ತೆಗೆದುಕೊಂಡಿದೆ. ಈ ಮೂಲಕ ಮಾಫಿಯಾ ತಡೆಗಟ್ಟಿದ್ದೇವೆ ಎಂದರು.
ಶೇಕಡಾ 50ರಷ್ಟು ಕೊಳವೆಬಾವಿಗಳು ಬರಿದಾಗಿದೆ. ಸಾವಿರಾರು ಟ್ಯಾಂಕರ್ ಗಳನ್ನು ನಾವು ನಿಯಂತ್ರಣಕ್ಕೆ ತೆಗೆದುಕೊಂಡು ನೀರಿನ ಮೂಲಗಳಿರುವ ಕಡೆಗಳಿಂದ ನೀರನ್ನು ಪೂರೈಸಲು ಮುಂದಾಗಿದ್ದೇವೆ. ದೂರದಿಂದ ನೀರು ಪೂರೈಸುವ ಕಾರಣ ಟ್ಯಾಂಕರ್ ನೀರಿನ ದರ ನಿಗದಿಯನ್ನು ಅಧಿಕಾರಿಗಳಿಗೆ ಬಿಟ್ಟಿದ್ದೇವೆ. ಕಾವೇರಿ ನೀರನ್ನು ಸಮರ್ಪಕವಾಗಿ ಪೂರೈಸಲಾಗುತ್ತಿದೆ. ಇನ್ನು ಬೆಂಗಳೂರಿನ ಹೊರವಲಯದ 110 ಹಳ್ಳಿಗಳಲ್ಲಿ ಕಾವೇರಿ ನೀರು ಪೂರೈಕೆ ಮೇ ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದರು.
ಸೋಮವಾರ ಬಿಜೆಪಿ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸಿದ ಡಿಸಿಎಂ, ಬಿಜೆಪಿಯವರು ಪ್ರತಿಭಟನೆ, ಹೋರಾಟ ಮಾಡಲಿ. ನಾವು ಮೇಕೆದಾಟು ಯೋಜನೆ ಯಾವ ಕಾರಣಕ್ಕೆ ಹೋರಾಟ ಮಾಡಿದೆವು? ಬೆಂಗಳೂರಿಗೆ ಕುಡಿಯುವ ನೀರಿನ ಸಾಮಸ್ಯೆಯಾಗಬಾರದು ಈ ಕಾರಣಕ್ಕೆ ಹೋರಾಟ ಮಾಡುತ್ತಿದ್ದೆವು. ಎಲ್ಲರಿಗೂ ನೀರಿನ ಬೆಲೆ ಅರ್ಥವಾಗುತ್ತಿದೆ. ಇನ್ನು ಮೂರ್ನಾಲ್ಕು ತಿಂಗಳು ಈ ಸಮಸ್ಯೆ ಇರುತ್ತವೆ. ಎಲ್ಲಾ ಸಮಸ್ಯೆ ಬಗೆಹರಿಸುತ್ತೇವೆ. ನಮಗೆ ನೀರಿನ ಬೆಲೆ ಗೊತ್ತಿದೆ ಎಂದು ಹೇಳಿದರು.