ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣದ ಬಗ್ಗೆ ಸರ್ಕಾರದ ವಿರುದ್ಧ ಟೀಕಿಸುವ ಬರದಲ್ಲಿ ವಿಪಕ್ಷ ಬಿಜೆಪಿ ವಿವಾದವನ್ನು ಸೃಷ್ಟಿಸಿದೆ. ಬ್ರ್ಯಾಂಡ್ ಬೆಂಗಳೂರು ಮಾಡಲು ಹೋಗಿ ಬಾಂಬ್ ಬೆಂಗಳೂರನ್ನಾಗಿಸುತ್ತಿದ್ದಾರೆ ಪಾ’ಕೈ’ಸ್ತಾನಿ ಬ್ರದರ್ಸ್ ಎಂದು ಆರೋಪಿಸಿದ್ದಾರೆ. ಬಿಜೆಪಿ ಟೀಕೆಗೆ ಕಿಡಿ ಕಾರಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಬಿಜೆಪಿಯವರು ತಮ್ಮ ರಾಜಕೀಯ ಲಾಭಕ್ಕಾಗಿ ರಾಜ್ಯದ ಘನತೆ ಹಾಳು ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ಬಿಜೆಪಿ ನಾಯಕರು ಇದನ್ನು ರಾಜಕೀಯ ಮಾಡಲು ಮುಂದಾಗಿದ್ದಾರೆ. ಅದಕ್ಕಾಗಿ ಕರ್ನಾಟಕ ರಾಜ್ಯ ಹಾಗೂ ಬೆಂಗಳೂರಿನ ಘನತೆಗೆ ಧಕ್ಕೆ ತರುತ್ತಿದ್ದಾರೆ. ಜೊತೆಗೆ ತಮ್ಮ ಗೌರವವನ್ನೂ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಗುಡುಗಿದರು.
ಅವರ ಕಾಲದಲ್ಲಿ ಏನೆಲ್ಲಾ ಆಗಿದೆ ಎಂಬುದನ್ನು ಮರೆತಿದ್ದಾರೆ. ಇಂತಹ ಸಂದರ್ಭದಲ್ಲಿ ದೇಶದ ಐಕ್ಯತೆ, ಸಮಗ್ರತೆ ಹಾಗೂ ಶಾಂತಿ ಬಗ್ಗೆ ಅರಿವಿರಬೇಕು. ಬಿಜೆಪಿಯವರಿಗೆ ಕನಿಷ್ಠ ಪರಿಜ್ಞಾನ ಇಲ್ಲ. ಸಮಯ ಪ್ರಜ್ಞೆ, ತಮ್ಮ ಜವಾಬ್ದಾರಿಯ ಅರಿವೂ ಅವರಿಗಿಲ್ಲದಾಗಿದೆ ಎಂದು ಕಿಡಿಕಾರಿದ್ದಾರೆ.
ಬಾಂಬ್ ಸ್ಫೋಟ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ತನಿಖೆಯಲ್ಲಿ ಪೊಲೀಸ್ ಅಧಿಕಾರಿಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಅವರು ತಮ್ಮ ಕರ್ತವ್ಯ ಮಾಡುತ್ತಿದ್ದಾರೆ ಎಂದು ಹೇಳಿದರು.