ನವದೆಹಲಿ: ಡಿಸಿಎಂ ಡಿ.ಕೆ.ಶಿವಕುಮಾರ್ ವಿದೇಶ ಪ್ರವಾಸದಲ್ಲಿದ್ದ ವೇಳೆಯೇ ಇತ್ತ ಕಾಂಗ್ರೆಸ್ ಸಚಿವರು ಸಾಲು ಸಾಲು ಡಿನ್ನರ್ ಮೀಟಿಂಗ್ ಮಾಡಿದ್ದು, ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ವಿಪಕ್ಷ ಬಿಜೆಪಿ ನಾಯಕರು ಇದೇ ವಿಚಾರವನ್ನು ಅಸ್ತ್ರವಾಗಿಸಿ ಡಿಸಿಎಂ ಡಿ.ಕೆ.ಶಿವಕುಮಾರ್ ಕಾಲೆಳೆಯುತ್ತಿದ್ದಾರೆ. ಕಾಂಗ್ರೆಸ್ ನಾಯಕರ ಡಿನ್ನರ್ ಮೀಟಿಂಗ್ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಡಿನ್ನರ್ ಮಿಟಿಂಗ್ ಆಯೋಜಿಸಿದ್ದ ಬೆನ್ನಲ್ಲೇ ಇದೀಗ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕೂಡ ಡಿನ್ನರ್ ಪಾರ್ಟಿ ಆಯೋಜನೆ ಮಾಡಿದ್ದಾರೆ. ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ವಿದೇಶದಿಂದ ವಾಪಾಸ್ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ನವದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಡಿನ್ನರ್ ಮೀಟಿಂಗ್ ಬಗ್ಗೆ ನನಗೆ ಮಾಹಿತಿ ಇಲ್ಲ, ನಾನು ಹೊರದೇಶದಲ್ಲಿದ್ದ ಕಾರಣಕ್ಕೆ ನನಗೆ ಇದರ ಬಗ್ಗೆ ಗೊತ್ತಿಲ್ಲ. ಬೆಂಗಳೂರಿಗೆ ಹೋದ ನಂತರ ಇದರ ಬಗ್ಗೆ ತಿಳಿದುಕೊಳ್ಳಲು ನಾನು ಪ್ರಯತ್ನಿಸುತ್ತೇನೆ ಎಂದು ತಿಳಿಸಿದ್ದಾರೆ.