ಬೆಂಗಳೂರು: ಅಧಿಕಾರ ಹಂಚಿಕೆ ಬಗ್ಗೆ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಭಾರಿ ಚರ್ಚೆಯಾಗುತ್ತಿರುವ ನಡುವೆಯೇ ಡಿಸಿಎಂ ಡಿ.ಕೆ.ಶಿವಕುಮಾರ್ ಈ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.
ಅಧಿಕಾರ ಹಂಚಿಕೆ ವಿಚಾರವಾಗಿ ಸಚಿವ ಮುನಿಯಪ್ಪ, ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವರು ಒಂದೊಂದು ಹೇಳಿಕೆ ನೀಡುತ್ತಿದ್ದಂತೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ ಶುರುವಾಗಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ನಮ್ಮಲ್ಲಿ ಯಾವುದೇ ಪವರ್ ಶೇರಿಂಗ್ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನಮ್ಮಲ್ಲಿ ಯಾವುದೇ ಅಧಿಕಾರ ಹಂಚಿಕೆ ಇಲ್ಲ. ಅಧಿಕಾರದಲ್ಲಿ ಯಾವ ಸೂತ್ರನೂ ಇಲ್ಲ, ಏನೂ ಇಲ್ಲ. ರಾಜಕೀಯ ಹೊಂದಾಣಿಕೆಯಿಂದ ಕೆಲಸ ಮಾಡುತ್ತಿದ್ದೇವೆ. ಸಿಎಂ ಕೆಲ ಜವಾಬ್ದಾರಿ ವಹಿಸಿದ್ದಾರೆ, ಕೆಲಸ ಮಾಡುತ್ತಿದ್ದೇನೆ ಎಂದರು.
ಅಧಿಕಾರ ಸೂತ್ರದ ಬಗ್ಗೆ ನಾನು ಏನೂ ಎಲ್ಲೂ ಮಾತನಾಡಿಲ್ಲ. ಯಾವ ಸೂತ್ರದ ಬಗ್ಗೆಯೂ ಯಾರೂ ಮಾತನಾಡುವ ಅವಶ್ಯಕತೆಯೂ ಇಲ್ಲ, ಅಗತ್ಯವೂ ಇಲ್ಲ ಎಂದು ಖಡಕ್ ಆಗಿ ಹೇಳಿದರು.