ಮೈಸೂರು ಮಹಾನಗರ ಪಾಲಿಕೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನ ಭುಗಿಲೆದ್ದಿದೆ.
ಮಾಜಿ ಸಚಿವ ತನ್ವೀರ್ ಸೇಠ್ ಅವರ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪಟ್ಟುಹಿಡಿದಿದ್ದಾರೆ. ನನ್ನ ವಿರುದ್ಧ ನನ್ನ ಕ್ಷೇತ್ರದಲ್ಲಿ ರಾಜಕೀಯ ಮೇಲಾಟ ಮಾಡುತ್ತಿದ್ದು ಹೀಗೆ ಮಾಡಿದರೂ ನಾನು ಸುಮ್ಮನೆ ಇರಬೇಕಾ ಎಂದು ಸಿದ್ದರಾಮಯ್ಯ ಗರಂ ಆಗಿದ್ದಾರೆ ಎನ್ನಲಾಗಿದೆ.
ತನ್ವಿರ್ ಸೇಠ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಸಿದ್ದರಾಮಯ್ಯ ಒತ್ತಡ ಹೇರಿದ್ದಾರೆ. ತನ್ವೀರ್ ಸೇಠ್ ವಿರುದ್ಧ ಕ್ರಮಕೈಗೊಳ್ಳದಿದ್ದರೆ ನವದೆಹಲಿಗೆ ಹೋಗಲು ಸಿದ್ದರಾಮಯ್ಯ ನಿರ್ಧರಿಸಿದ್ದು, ಕೆಪಿಸಿಸಿ ಅಧ್ಯಕ್ಷರ ವಿರುದ್ಧ ಹೈಕಮಾಂಡ್ ಗೆ ದೂರು ನೀಡಲು ಚಿಂತನೆ ನಡೆಸಿದ್ದಾರೆ. ತಮ್ಮ ಬೆಂಬಲಿಗರ ನಿಯೋಗದೊಂದಿಗೆ ದೆಹಲಿಗೆ ತೆರಳಿ ವರಿಷ್ಠರಿಗೆ ದೂರು ನೀಡಲು ತೀರ್ಮಾನಿಸಿದ್ದಾರೆ.
ಸೋಮವಾರ ತನ್ವೀರ್ ಸೇಠ್ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಲಿದ್ದಾರೆ. ಅವರು ಕೈಗೊಳ್ಳುವ ನಿರ್ಧಾರದ ಮೇಲೆ ಮುಂದಿನ ರಣತಂತ್ರ ರೂಪಿಸಲು ಸಿದ್ದರಾಮಯ್ಯ ಪ್ಲಾನ್ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.