ಬೆಂಗಳೂರು: ಎಟಿಎಂ ಸರ್ಕಾರದಲ್ಲಿ ಭ್ರಷ್ಟಾಚಾರದ ದರ್ಬಾರ್ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಪೋಸ್ಟರ್ ಬಿಡುಗಡೆ ಮಾಡಿದ್ದ ಬಿಜೆಪಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಎಲ್ಲಾ ಎಟಿಎಂ ಅವರದ್ದೇ ಜನ ತೀರ್ಪು ಕೊಟ್ಟಿದ್ದಾರೆ. ರಾಜ್ಯದ ಜನತೆ ಬಿಜೆಪಿಯನ್ನು ತಿರಸ್ಕರಿಸಿದ್ದಾಗಿದೆ. ಬಿಜೆಪಿ ನಾಯಕರು, ಮುಖಂಡರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ. ಹಾಗಾಗಿ ಬಿಜೆಪಿ ನಾಯಕರು ಇಂತಹ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು.
ಪಕ್ಷದ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಒಂದೊಂದಾಗಿ ಸಾಕಾರಗೊಳಿಸುತ್ತಿದ್ದೇವೆ. ಮುಂದಿನ ದಿನಗಳಲ್ಲೂ ಈ ಕೆಲಸ ಮುಂದುವರಿಸಿಕೊಂಡು ಹೋಗುತ್ತೇವೆ. ಕಾಂಗ್ರೆಸ್ ಪಕ್ಷ ಸೇರುವವರ ದೊಡ್ಡ ಪಟ್ಟಿ ಇದೆ. ಅದನ್ನು ಈಗ ಬಹಿರಂಗಪಡಿಸುವುದಿಲ್ಲ. ಒಬ್ಬೊಬ್ಬರನ್ನೇ ಪಕ್ಷಕ್ಕೆ ಸೇರಿಸಿಕೊಳ್ಳುವ ಕೆಲಸ ಮಾಡುತ್ತೇವೆ. ಈ ಪ್ರಕ್ರಿಯೆ ಪ್ರತಿ ಬೂತ್ ಹಾಗೂ ಹಳ್ಳಿಗಳಲ್ಲಿ ಮುಂದುವರೆಯಲಿದೆ ಎಂದು ಹೇಳಿದರು.